ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಮಿತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೂ ಸ್ಪಂದನೆ ನೀಡಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದ ರಮೇಶ ಜಿಗಜಿಣಗಿ ಅವರು, ಸೋಮವಾರ ಎಲೆಕ್ಟ್ರಿಕ್ ಬೈಕ್ನಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಾರ್ವಜನಿಕರ ಗಮನ ಸೆಳೆದರು.

ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ತಮ್ಮ ನಿವಾಸದಿಂದಲೇ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣ ಆರಂಭಿಸಿದ ಸಂಸದರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಿವಿಧ ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ವೇಳೆ ಮಾತನಾಡಿದ ಅವರು, ಇಂಧನ ಉಳಿತಾಯವು ಇಂದಿನ ಅವಶ್ಯಕತೆಯಾಗಿದ್ದು, ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸಾರ್ವಜನಿಕರು ಸಾಧ್ಯವಾದಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಿರುವ ಹಿನ್ನೆಲೆ, ಪರ್ಯಾಯ ಇಂಧನ ಮತ್ತು ವಿದ್ಯುತ್ ವಾಹನಗಳ ಬಳಕೆ ಹೆಚ್ಚಾಗುವುದು ಕಾಲದ ಅಗತ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿರುವ “ಮಿತ ಬಳಕೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿ” ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಗಜಿಣಗಿ ಅಭಿಪ್ರಾಯಪಟ್ಟರು.

