ಬಾಗಲಕೋಟೆ ಜಿಲ್ಲೆಯ ಬಾದಾಮಿ ಸುಪ್ರಸಿದ್ಧ ಅಗಸ್ತ್ಯ ಹೊಂಡದಲ್ಲಿ ಬಿದ್ದು 19 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಧಾವಿಸಿದ್ದು, ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಬಾದಾಮಿ ತಾಲ್ಲೂಕಿನ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ ಬಿದ್ದು 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಲೆಕರ್ (19) ಎಂದು ಗುರುತಿಸಲಾಗಿದೆ. ಅಗಸ್ತ್ಯ ಹೊಂಡದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಯುವಕ ಹೊಂಡಕ್ಕೆ ಬಿದ್ದು ನಾಪತ್ತೆಯಾದ ತಕ್ಷಣವೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಆದರೆ, ಯುವಕನ ಸಾವಿಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ಇನ್ನು ನಿಗೂಢವಾಗಿಯೇ ಉಳಿದಿದೆ.

ಘಟನೆಯ ಬಗ್ಗೆ ಸಾರ್ವಜನಿಕರು ತಕ್ಷಣವೇ ತುರ್ತು ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಬಾದಾಮಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೊಂಡದ ತಳಕ್ಕೆ ಇಳಿದಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸದ್ಯ ಯುವಕನ ಶವದ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
