ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಮೇ 24ರಂದು ಕಾಂಗ್ರೆಸ್ ಪಕ್ಷದ ವತಿಯಿಂದ “ಯುವಶಕ್ತಿ ಕಾರ್ಯಕ್ರಮ”ವನ್ನು ಭವ್ಯವಾಗಿ ಆಯೋಜಿಸಲಾಗಿದೆ ಎಂದು ವಿಜಯಪುರ ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜಗುರು ಉಳ್ಳಾಗಡ್ಡಿ ತಿಳಿಸಿದರು. ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ರಾಜಕೀಯ ಜಾಗೃತಿ ಮೂಡಿಸುವುದು, ಸಂಘಟನಾತ್ಮಕ ಬಲವರ್ಧನೆ ಹಾಗೂ ಕಾಂಗ್ರೆಸ್ ಪಕ್ಷದ ತತ್ವಗಳನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ತಿಕೋಟಾ ಪಟ್ಟಣದ ಕನಕದಾಸ ಮಂಗಳ ಕಾರ್ಯಾಲಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಯುವಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಯುವಕರಿಗೆ ಉದ್ಯೋಗ, ಶಿಕ್ಷಣ, ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ಕುರಿತಂತೆ ಸರ್ಕಾರ ಕೈಗೊಂಡಿರುವ ಯೋಜನೆಗಳ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಚರ್ಚೆಗಳು ನಡೆಯಲಿವೆ. ಜೊತೆಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಗ್ರಾಮಮಟ್ಟದಿಂದ ಬಲಪಡಿಸುವ ದಿಶೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ರಾಜಗುರು ಉಳ್ಳಾಗಡ್ಡಿ ಮನವಿ ಮಾಡಿದರು.
