Accident

ಮಹಾಲಿಂಗಪುರದಲ್ಲಿ ಜಿಟಿ ಜಿಟಿ ಮಳೆ ಮಧ್ಯೆ ಭೀಕರ ಅಪಘಾತ; ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ!

Share

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಜಿಟಿ ಜಿಟಿ ಮಳೆಯ ನಡುವೆಯೇ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕ ಸೇರಿ ಐವರು ಪ್ರಯಾಣಿಕರು ಕಾರಿನಲ್ಲಿದ್ದರು. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಪುರಸಭೆ ಕಾರ್ಯಾಲಯದ ಎದುರು ಈ ದುರ್ಘಟನೆ ನಡೆದಿದೆ. ಪಟ್ಟಣದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದ ಪರಿಣಾಮ ರಸ್ತೆ ನಯವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು, ಚಾಲಕನಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿವೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ರಸ್ತೆಯ ಮಧ್ಯದಲ್ಲೇ ಕಾರು ಪಲ್ಟಿಯಾದ ಪರಿಣಾಮ ಮಹಾಲಿಂಗಪುರದ ಪ್ರಮುಖ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯ ನಡುವೆಯೂ ವಾಹನ ಸವಾರರು ಮತ್ತು ಸಾರ್ವಜನಿಕರು ರಸ್ತೆಯಲ್ಲಿ ಪರದಾಡುವಂತಾಯಿತು. ಘಟನಾ ಸ್ಥಳಕ್ಕೆ ಮಹಾಲಿಂಗಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪಲ್ಟಿಯಾಗಿದ್ದ ಕಾರನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಕುರಿತು ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!