ಕುಂದಾನಗರಿ ಬೆಳಗಾವಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಹಿರೇಬಾಗೇವಾಡಿ ಮತ್ತು ತಿಲಕವಾಡಿ ಠಾಣಾ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ರಂಪಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಸಲಾಕೆಗೆ ತಳ್ಳಿದ್ದಾರೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯ ಪ್ರಕಾರ, ಹಿರೇಬಾಗೇವಾಡಿ-ಬಸ್ಲಾಪೂರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಸವರಾಜ ಚಂದ್ರಶೇಖರ ಧೂಳಪ್ಪನವರ (50) ಎಂಬಾತನನ್ನು ಪಿಎಸ್‌ಐ ಬಸವರಾಜ ಮಿಟಗಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 3,580 ರೂಪಾಯಿ ಮೌಲ್ಯದ ವಿವಿಧ ಬ್ರ್ಯಾಂಡ್‌ಗಳ ವಿಸ್ಕಿ ಪ್ಯಾಕೆಟ್‌ಗಳು ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ, ತಿಲಕವಾಡಿ ಠಾಣೆಯ ಪಿಐ ಪರಶುರಾಮ ಪೂಜೇರಿ ನೇತೃತ್ವದ ತಂಡವು ನಗರದ ಆರ್‌ಪಿಡಿ ಹಾಗೂ ಜೈನ್ ಕಾಲೇಜುಗಳ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುವಂತೆ ಅಸಹಜವಾಗಿ ವರ್ತಿಸುತ್ತಿದ್ದ ಆಕಾಶ್ ಬಸೂರ್ (25) ಮತ್ತು ಅಭಿಷೇಕ್ ಹರಿಜನ್ (25) ಎಂಬ ಯುವಕರನ್ನು ವಶಕ್ಕೆ ಪಡೆದಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇವರಿಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದ್ದು, ಯಶಸ್ವಿ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿಯವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

