ಬೆಳಗಾವಿಯ ಸದಾಶಿವನಗರದ ಸದಾಶಿವ ಮಂದಿರದಲ್ಲಿ ಗೌರಿ ಮಹಿಳಾ ಮಂಡಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ, ನಾಡಿನ ಖ್ಯಾತ ಶಿಕ್ಷಣ ತಜ್ಞರು ಭಾಗವಹಿಸಿ ವಿದ್ಯಾರ್ಥಿಗಳ ಮುಂದಿನ ಸುಂದರ ಭವಿಷ್ಯಕ್ಕೆ ಅಮೂಲ್ಯವಾದ ಮಾರ್ಗದರ್ಶನ ನೀಡಿದರು.


ಮೇ 28ರಂದು ನಡೆದ ಈ ಸಮಾರಂಭದಲ್ಲಿ ಬೆಳಗಾವಿಯ ಬಿ. ವಿ. ಬೆಲ್ಲದ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಗುಜರಾತ್ ನ್ಯಾಷನಲ್ ಲಾ ಯೂನಿವರ್ಸಿಟಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಶೋಭಲತಾ ಉದಪುಡಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ನಂತರ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಕೇವಲ ಅಂಕಗಳಿಗೆ ಸೀಮಿತವಾಗದೆ ಜ್ಞಾನಾರ್ಜನೆಗೆ ಆದ್ಯತೆ ನೀಡಬೇಕು ಮತ್ತು ಪಾಲಕರು ಅವರ ಆಸಕ್ತಿಗೆ ತಕ್ಕಂತೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಗೌರಿ ಮಹಿಳಾ ಮಂಡಳದ ಉಪಾಧ್ಯಕ್ಷರಾದ ಶ್ರೀಮತಿ ಶಶಿಕಲಾ ಜಗಜಂಪಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಗೋಕಾಕ ಹಾಗೂ ಕಮಿಟಿಯ ಪದಾಧಿಕಾರಿಗಳು, ಎಲ್ಲ ಗೌರವಾನ್ವಿತ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.


