Kagawad

ಮಳೆಗಾಲದ ನೆರೆ ಹಾವಳಿ ತಡೆಗೆ ಕಾಗವಾಡ ತಹಶೀಲ್ದಾರ ರವೀಂದ್ರ ಹಾದಿಮನಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Share

ಕಾಗವಾಡ ತಾಲೂಕಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಂಬಂಧ ಯಾವುದೇ ಸಮಸ್ಯೆ ಉಂಟಾಗಿಲ್ಲ. ಪ್ರಸ್ತುತ ಇನ್ನೂ ಎಂಟು ವಾರಗಳಿಗೆ ಸಾಕಾಗುವಷ್ಟು ನೀರು ಹಾಗೂ ಮೇವಿನ ವ್ಯವಸ್ಥೆ ಲಭ್ಯವಿದ್ದು, ಯಾವುದೇ ಕೊರತೆ ಇಲ್ಲ ಎಂದು ಕಾಗವಾಡ ತಹಶೀಲ್ದಾರ ರವೀಂದ್ರ ಹಾದಿಮನಿ ತಿಳಿಸಿದರು.

ಶುಕ್ರವಾರ ಕಾಗವಾಡದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ ಹಾವಳಿ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ತಹಶೀಲ್ದಾರ ರವೀಂದ್ರ ಹಾದಿಮನಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ ರವೀಂದ್ರ ಹಾದಿಮನಿ, “ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿಲ್ಲ. ಆದರೆ ಮುಂಬರುವ ಮಳೆಗಾಲದಲ್ಲಿ ಕೃಷ್ಣಾ ನದಿಗೆ ಮಹಾಪೂರ ಬರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಸಭೆ ಹಮ್ಮಿಕೊಳ್ಳಲಾಗಿದೆ” ಎಂದರು.

ಕೃಷ್ಣಾ ನದಿ ತೀರದ ಎಂಟು ಗ್ರಾಮಗಳು ಸಂಪೂರ್ಣವಾಗಿ ನೆರೆ ಬಾಧೆಗೆ ಒಳಗಾಗುವ ಸಾಧ್ಯತೆ ಇದ್ದು, ಐದು ಗ್ರಾಮಗಳು ಅಲ್ಪ ಪ್ರಮಾಣದಲ್ಲಿ ಬಾಧಿತವಾಗುವ ಸಾಧ್ಯತೆ ಇದೆ. ಆ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯ ದೋಣಿಗಳ ವ್ಯವಸ್ಥೆ ಮಾಡಬೇಕಿದೆ. ಈಗಾಗಲೇ ಎಂಟು ದೋಣಿಗಳಿದ್ದು, ಅವುಗಳಲ್ಲಿ ಮೂರು ದೋಣಿಗಳಿಗೆ ತಾಂತ್ರಿಕ ದೋಷಗಳಿರುವುದರಿಂದ ಅವುಗಳನ್ನು ತಕ್ಷಣ ದುರಸ್ತಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಅರಣ್ಯ ಹಾಗೂ ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಗಾಳಿ-ಮಳೆಯಿಂದ ಉರುಳಬಹುದಾದ ಮರಗಳ ಮಾಹಿತಿ ಪಡೆದು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳನ್ನು ಗುರುತಿಸಿ, ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಪಶು ವೈದ್ಯಾಧಿಕಾರಿಗಳೂ ಸಹ ಇದೇ ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜೂನ್ ತಿಂಗಳ ಅವಧಿಯಲ್ಲಿ ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ಮಂಜೂರು ಮಾಡುವುದಿಲ್ಲ. ಎಲ್ಲರೂ ತಮ್ಮ ಕೇಂದ್ರ ಸ್ಥಾನದಲ್ಲೇ ಉಳಿದು ಕರ್ತವ್ಯ ನಿರ್ವಹಿಸಬೇಕು ಎಂಬುದು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶವಾಗಿದೆ ಎಂದು ತಹಶೀಲ್ದಾರರು ಹೇಳಿದರು.

ಕಾಗವಾಡ ಪಿಎಸ್‌ಐ ರಾಘವೇಂದ್ರ ಖೋತ್ ಮಾತನಾಡಿ, ಕಾಗವಾಡ ತಾಲೂಕಿನ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಇತರ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು. ಪ್ರತಿಯೊಂದು ಗ್ರಾಮದಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಮಳೆಗಾಲದಲ್ಲಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಜವಾಬ್ದಾರಿ ಲೋಕೋಪಯೋಗಿ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ಮೇಲಿದೆ. ನೀರು ತುಂಬಿ ವಾಹನ ಸವಾರರಿಗೆ ತೊಂದರೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ಸಭೆಯಲ್ಲಿ ಗ್ರೇಡ್-೨ ತಹಶಿಲ್ದಾರ್ ರಶ್ಮಿ ಜಕಾತೆ, ಉಪತಹಶಿಲ್ದಾರ್ ವಿಜಯಕುಮಾರ ಚೌಗುಲ್ಲೆ, ತಾಲೂಕು ವೈದ್ಯಾಧಿಕಾರಿ ಡಾ. ಪುಷ್ಪಲತಾ ಸುಣ್ಣದಕಲ್, ಕಾಗವಾಡ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಸನ್ನ ಕಲ್ಯಾಣಶೆಟ್ಟಿ, ಶೇಡಬಾಳ ಪಟ್ಟಣ ಪಂಚಾಯಿತಿ ಅಧಿಕಾರಿ ಕೆ.ಕೆ. ಗಾವಡೆ, ಐನಾಪುರ ಹಾಗೂ ಉಗಾರ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ್ ಕೊಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾವಿ, ಕೃಷಿ ಅಧಿಕಾರಿ ನಿಂಗಣ್ಣಾ ಬಿರಾದಾರ್, ಕಾಗವಾಡ ಸಿಡಿಪಿಒ, ಹೆಸ್ಕಾಂ ಇಲಾಖೆಯ ದರಿಗೌಡ್ಡಾ ಅರಳಿಕಟ್ಟಿ, ಪ್ರವೀಣ ಸುರ್ಯವಂಶಿ, ಅಲೋಕ ದಿನಕನ್ನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!