ಅಡುಗೆ ಅನಿಲ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರಕ್ಕೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಆರೋಪಿಸಿದರು. “ಜನರು ಹೇಗಾದರೂ ಹಾಳಾಗಲಿ ಎಂಬ ಧೋರಣೆಯಿಂದ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾಸ್ ದರ ಹೆಚ್ಚಳದಿಂದ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಹೊರೆ ಬೀಳಲಿದ್ದು, ದೇಶದ ಆರ್ಥಿಕತೆಯ ಮೇಲೆಯೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಬೆಲೆ ಏರಿಕೆಯನ್ನು ತಗ್ಗಿಸಲು ಬಾಂಡ್‌ಗಳನ್ನು ಖರೀದಿಸಿ ಜನರ ಮೇಲಿನ ಹೊರೆ ಕಡಿಮೆ ಮಾಡಲಾಗಿತ್ತು ಎಂದು ಅವರು ತಿಳಿಸಿದರು. ಇದೇ ವೇಳೆ ಕಾಕರೋಚ್ ಜನತಾ ಪಾರ್ಟಿ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ ಎಂದು ಹೇಳಿದರು.
“ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ನಡೆಸಲಿ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು

