ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕಳೆದ ಒಂದು ಗಂಟೆಯಿಂದ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲಾ ಕೇಂದ್ರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದು ಹೋಗಿದ್ದ ಜನರಿಗೆ ವಾತಾವರಣ ತಂಪಾಗುವ ಮೂಲಕ ನಿರಾಳತೆ ತಂದಿದೆ. ಆದರೆ, ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬಾಗಲಕೋಟೆ ಹಳೆ ನಗರ, ವಿದ್ಯಾಗಿರಿ, ನವನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇವತ್ತು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಕಳೆದ ಒಂದು ಗಂಟೆಯಿಂದ ಸತತವಾಗಿ ಮಳೆ ಸುರಿಯುತ್ತಿದೆ. ರಸ್ತೆಗಳ ಮೇಲೆ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಆದಾಗ್ಯೂ, ಈ ಮುಂಗಾರು ಮಳೆಯು ಜಿಲ್ಲೆಯ ಅನ್ನದಾತರಲ್ಲಿ ಹೊಸ ಆಶಾವಾದ ಮೂಡಿಸಿದೆ. ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅತ್ಯಂತ ಅನುಕೂಲಕರ ವಾತಾವರಣ ಸೃಷ್ಟಿಯಾಗಿರುವುದರಿಂದ ರೈತ ವಲಯದಲ್ಲಿ ಸಂತಸದ ಅಲೆ ಎದ್ದಿದ್ದು, ಬಿತ್ತನೆ ಕಾರ್ಯಕ್ಕೆ ಭೂಮಿ ಹಸನುಗೊಳಿಸುವ ಕೆಲಸದಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ.

