Belagavi

ಮಹಿಳೆಯ ಖಾಸಗಿ ಫೋಟೋಗಳನ್ನು ಪತಿ, ಸಂಬಂಧಿಕರಿಗೆ ಕಳುಹಿಸಿ ಕಿರುಕುಳ; ಶಿಕಾರಿಪುರ ಯುವಕನ ವಿರುದ್ಧ ಎಫ್‌ಐಆರ್

Share

ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಖಾಸಗಿ ಕ್ಷಣಗಳ ಫೋಟೊಗಳನ್ನು ಆಕೆಯ ಪತಿ ಹಾಗೂ ಸಂಬಂಧಿಕರ ಮೊಬೈಲ್‌ಗಳಿಗೆ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಯುವಕನೊಬ್ಬನ ವಿರುದ್ಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ನಿವಾಸಿ ಸುನೀಲ ಅಡಗಟ್ಟಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಗೆ ಕಳೆದ ಐದಾರು ವರ್ಷಗಳಿಂದ ಮಹಿಳೆಯ ಪರಿಚಯವಿತ್ತು. ಪರಿಚಯವು ಆಪ್ತತೆಯಾಗಿ ಬೆಳೆದ ಹಿನ್ನೆಲೆ ಇಬ್ಬರೂ ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ವಿವಿಧ ಹೋಟೆಲ್ ಮತ್ತು ಲಾಡ್ಜ್‌ಗಳಲ್ಲಿ ಭೇಟಿಯಾಗುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ಮಹಿಳೆಗೆ ತಿಳಿಯದಂತೆ ಆಕೆಯ ಕೆಲವು ಖಾಸಗಿ ಫೋಟೊಗಳನ್ನು ಆರೋಪಿ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಆರೋಪಿ ಮಹಿಳೆಯ ಪತಿ, ಸಹೋದರರು ಹಾಗೂ ಇತರ ಹತ್ತಿರದ ಸಂಬಂಧಿಕರ ವಾಟ್ಸ್‌ಆ್ಯಪ್ ಸಂಖ್ಯೆಗಳಿಗೆ ಆ ಫೋಟೊಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಮಹಿಳೆಯ ಮೊಬೈಲ್ ಸಂಖ್ಯೆಗೆ ನಿರಂತರವಾಗಿ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಹಿಳೆಯ ಗೌಪ್ಯತೆ ಹಾಗೂ ಮಾನಹಾನಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದಲೇ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸೈಬರ್ ಅಪರಾಧ ಮತ್ತು ಮಹಿಳೆಯರ ಗೌಪ್ಯತೆಗೆ ಸಂಬಂಧಿಸಿದ ಗಂಭೀರ ಪ್ರಕರಣವಾಗಿ ಪರಿಗಣಿಸಿರುವ ಸಿಇಎನ್ ಠಾಣೆ ಪೊಲೀಸರು ಆರೋಪಿಯ ವಿರುದ್ಧ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.

Tags:

error: Content is protected !!