ಬಸವಾದಿ ಶರಣರ ತತ್ವ-ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆಯುತ್ತಿರುವ ಹಿಂದೂ ಸಮಾವೇಶಗಳಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ಕರ್ನಾಟಕ ರಾಜ್ಯ ಪ್ರವೇಶಿಸದಂತೆ ನಿರ್ಬಂಧ ಹೇರಬೇಕು ಎಂದು ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ಡಾ. ರವಿಕುಮಾರ ಬಿರಾದಾರ ಆಗ್ರಹಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣ ಹಾಗೂ ಶರಣರ ವಿಚಾರಧಾರೆ ಸಮಾನತೆ, ಮಾನವೀಯತೆ ಮತ್ತು ವೈಚಾರಿಕ ಸ್ವಾತಂತ್ರ್ಯದ ಮೇಲೆ ಆಧಾರಿತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಸಂಘಟನೆಗಳು ಮತ್ತು ವ್ಯಕ್ತಿಗಳು ಬಸವಣ್ಣನವರ ಹೆಸರನ್ನು ಬಳಸಿಕೊಂಡು ಹಿಂದೂತ್ವದ ಅಜೆಂಡಾವನ್ನು ಮುಂದಿಟ್ಟುಕೊಂಡು ಸಮಾವೇಶಗಳನ್ನು ನಡೆಸಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.
ಬಸವಣ್ಣನವರು ಜಾತಿ, ವರ್ಣ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾಗಿದ್ದು, ಅವರ ತತ್ವಗಳನ್ನು ಯಾವುದೇ ಒಂದು ಧರ್ಮ ಅಥವಾ ರಾಜಕೀಯ ಸಿದ್ಧಾಂತಕ್ಕೆ ಸೀಮಿತಗೊಳಿಸುವ ಪ್ರಯತ್ನ ಸರಿಯಲ್ಲ. ಇಂತಹ ಕಾರ್ಯಕ್ರಮಗಳು ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಬಸವನಗೌಡ ಹರನಾಳ ಮಾತನಾಡಿ, ಬಸವಣ್ಣನವರ ವಿಚಾರಧಾರೆಯನ್ನು ತಿರುಚಿ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಕೂಡಲೇ ಇಂತಹ ಸಮಾವೇಶಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಬಿರಾದಾರ, ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಬಸವ ತತ್ವಗಳಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬಾರದು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವಿಧ ಲಿಂಗಾಯತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
