ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಹಾಗೂ ಬೆಂಬಲಿಗರು ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಅಬ್ಬಯ್ಯ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಸಚಿವ ಸ್ಥಾನಕ್ಕೆ ಅರ್ಹರಾಗಿದ್ದಾರೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಧಾರವಾಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ ಮುಖಂಡರು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಈ ಬಾರಿ ಕೂಡ ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೇಳಿಬರುತ್ತಿರುವ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ಸಿಗುತ್ತದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ. ಹೈಕಮಾಂಡ್ ಈ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
