Bagalkote

ಇಳಕಲ್ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಅಗ್ನಿ ಅವಾಂತರ: ಕಿಡಿಗೇಡಿಗಳ ಕೃತ್ಯಕ್ಕೆ ಹಳೇ ದಾಖಲೆಗಳು ಭಸ್ಮ!

Share

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ತಹಶೀಲ್ದಾರ್ ಕಚೇರಿಯ ಆವರಣದಲ್ಲಿರುವ ವೇಸ್ಟ್ ರೂಂಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪ್ರಮುಖ ಹಳೇ ದಾಖಲಾತಿಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿನ್ನೆ ತಡರಾತ್ರಿ ಕಿಡಿಗೇಡಿಗಳು ತಮ್ಮ ವಿಕೃತ ಚೇಷ್ಟೆಯನ್ನು ಮೆರೆದಿದ್ದಾರೆ. ಕಚೇರಿಯ ರದ್ದಿ ಪೇಪರ್ ಹಾಗೂ ಕಬ್ಬಿಣದ ಕಚ್ಚಾ ವಸ್ತುಗಳನ್ನು ಇಟ್ಟಿದ್ದ ವೇಸ್ಟ್ ರೂಂಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ಕೊಠಡಿಯಲ್ಲಿದ್ದ ರದ್ದಿ ಮತ್ತು ಹಳೆಯ ಪ್ರಮುಖ ದಾಖಲಾತಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಕೃತ್ಯ ಎಸಗುವ ಮುನ್ನ ಕಿಡಿಗೇಡಿಗಳು ಕಚೇರಿ ಆವರಣದಲ್ಲಿದ್ದ ಹಲವು ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಹಲವು ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಕುಡುಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇಳಕಲ್ ತಹಶೀಲ್ದಾರ್ ಅಮರೇಶ ಪಮ್ಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಳಕಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ತಹಶೀಲ್ದಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Tags:

error: Content is protected !!