ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಕಳೆದ ಒಂದು ದಶಕದಿಂದ ರಸ್ತೆ ಹಾಗೂ ಚರಂಡಿ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ತಮ್ಮ ಅಳಲು ತೋಡಿಕೊಂಡಿದ್ದಾರೆ. 15 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆಯನ್ನು ನೀಡಿದ್ದಾರೆ.


ಬೆಳಗಾವಿ ತಾಲೂಕಿನ ಮುತಗಾ ಗ್ರಾಪಂ ವ್ಯಾಪ್ತಿಯಲ್ಲಿನ ಶ್ರೀರಾಮ್ ಕಾಲೋನಿ, ಸಾಯಿ ನಗರ, ಗೋಕುಲ್ ನಗರ ಹಾಗೂ ವಿನಾಯಕ್ ನಗರ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಅಪೂರ್ಣ ರಸ್ತೆ ಕಾಮಗಾರಿ, ಅವ್ಯವಸ್ಥಿತ ಚರಂಡಿ ವ್ಯವಸ್ಥೆ ಹಾಗೂ ಕಸ ವಿಲೇವಾರಿ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿ ಬುಧವಾರ ಇಲ್ಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓಗೆ ಮನವಿ ಸಲ್ಲಿಸಿದರು. ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ರಸ್ತೆಗಳು ಸಂಪೂರ್ಣ ಹದಗೆಟ್ಟು ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು, ಪಾದಚಾರಿಗಳು, ವಿಶೇಷವಾಗಿ ಮಕ್ಕಳು ಹಾಗೂ ವೃದ್ಧರು ಸಂಚಾರಕ್ಕೆ ಪರದಾಡುವಂತಾಗಿದೆ.ಇನ್ನೊಂದೆಡೆ, ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆ ಹಾಗೂ ಮನೆಗಳ ಮುಂದೆ ಹರಿದು ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಿಸಿದೆ ಎಂದು ಮನವಿಯಲ್ಲಿ ದೂರಿದ್ದಾರೆ.ಕಸ ವಿಲೇವಾರಿ ವ್ಯವಸ್ಥೆಯೂ ಅಸ್ತವ್ಯಸ್ತವಾಗಿದ್ದು, ಕಸದ ವಾಹನಗಳು ನಿಯಮಿತವಾಗಿ ಬಾರದ ಕಾರಣ ರಸ್ತೆ ಬದಿಗಳಲ್ಲಿ ಕಸದ ರಾಶಿ ಜಮೆಯಾಗುತ್ತಿದೆ. ದುರ್ವಾಸನೆ ಹರಡುತ್ತಿದ್ದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕಳೆದ ಎರಡು ದಶಕಗಳಿಂದ ನಿವಾಸಿಗಳು ತೆರಿಗೆ ಪಾವತಿಸುತ್ತಿದ್ದರೂ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಲವು ಬಾರಿ ಚರ್ಚೆ ನಡೆದಿದ್ದರೂ ಅನುದಾನ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ವಿಶೇಷ ಅನುದಾನ ಬಿಡುಗಡೆ ಮಾಡಿ, ಅಪೂರ್ಣ ರಸ್ತೆ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸುವ ಜೊತೆಗೆ ನಿಯಮಿತ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮುಂಬರುವ 15 ದಿನಗಳಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೇ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಗೆ ಕಪ್ಪು ಬಾವುಟ ತೋರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆಯನ್ನು ನೀಡಿದ್ದಾರೆ.
ಈ ವೇಳೆ ಮುತಗಾ ಗ್ರಾಪಂ ಸದಸ್ಯ ರವಿ ಕೋಟಬಾಗಿ, ಆಕಾಶ ಶೆಟ್ಟಿ, ಶಿವು ಪಾಟೀಲ್, ವಿನೋದ್ ಕುಲಕರ್ಣಿ, ಮಡಿವಾಳಪ್ಪ ಕಲಬಾವಿ, ಶಾಂತಿನಾಥ ಬಳಿಗಾರ, ಸಿ.ಬಿ.ಯರಗಂಬಳಿಮಠ, ಧನಪಾಲ ಓಕಳಿ ಸೇರಿದಂತೆ ಇನ್ನುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
