ಖಾನಾಪುರ ತಾಲೂಕಿನ ಗವಾಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಸಮಗೊಂಡಿದ್ದು, ಇಡೀ ಪ್ರದೇಶ ಕತ್ತಲಲ್ಲಿ ಮುಳುಗಿದೆ. ದೇವಗಾಂವ್ ರಸ್ತೆಯಲ್ಲಿ ಬೃಹತ್ ಮರಗಳ ರೆಂಬೆಗಳು ಮುರಿದು ಬಿದ್ದಿದ್ದರಿಂದ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಸ್ಥಳೀಯರ ದೈನಂದಿನ ವ್ಯವಹಾರಗಳು ಸಂಪೂರ್ಣವಾಗಿ ಬಂದ್ ಆಗಿವೆ.

ದಟ್ಟ ಅರಣ್ಯ ಪ್ರದೇಶದಿಂದ ಕೂಡಿರುವ ಖಾನಾಪುರ ತಾಲೂಕಿನ ಗವಾಳಿ ಪರಿಸರದಲ್ಲಿ ಮುಂಗಾರು ಮಳೆ ಆರ್ಭಟ ಆರಂಭವಾಗಿದ್ದು, ಬಿರುಗಾಳಿ ಸಹಿತ ಸುರಿದ ಮುಸಲಧಾರೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅಲ್ಲದೆ ದೇವಗಾಂವ್ ರಸ್ತೆಯ ಅರಣ್ಯ ವ್ಯಾಪ್ತಿಯಲ್ಲಿ ಮರದ ಕೊಂಬೆಗಳು ರಸ್ತೆಗೆ ಉರುಳಿದ್ದರಿಂದ ಪಾದಚಾರಿ ಮಾರ್ಗವೂ ಬಂದ್ ಆಗಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಗವಾಳಿಯ ಸಾಮಾಜಿಕ ಕಾರ್ಯಕರ್ತ ಆನಂದ್ ಗಾವಡೆ, ಜನಪ್ರತಿನಿಧಿಗಳು ಈ ಸಮಸ್ಯೆಯತ್ತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಹೆಸ್ಕಾಂ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು, ರಸ್ತೆ ಮೇಲಿನ ಕೊಂಬೆಗಳನ್ನು ತೆರವುಗೊಳಿಸಿ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
