Vijaypura

ಬಸವನಬಾಗೇವಾಡಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

Share

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವನಗರದ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಅವರು ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ವಿಶೇಷ ಕಾಳಜಿ ವಹಿಸಬೇಕು ಎಂದು ಸೂಚಿಸಿದರು. “ಎರಡು ಹನಿ ಜೀವನದ ರಕ್ಷಣೆ” ಎಂಬ ಸಂದೇಶದೊಂದಿಗೆ ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕರೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಸಾಬಿರ ಪಟೇಲ್ ಮಾಹಿತಿ ನೀಡಿ, ಬಸವನಬಾಗೇವಾಡಿ ತಾಲೂಕಿನ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 143 ಗ್ರಾಮಗಳು ಹಾಗೂ 38 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 43,554 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 221 ಬೂತ್‌ಗಳು, 6 ಟ್ರಾನ್ಸಿಟ್ ತಂಡಗಳು, 10 ಮೊಬೈಲ್ ತಂಡಗಳು, ಒಟ್ಟು 237 ತಂಡಗಳು, 474 ಸಿಬ್ಬಂದಿ ಹಾಗೂ 45 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಎಂ.ಬಿ. ಸೊನ್ನದ, ಡಾ. ಪ್ರಕಾಶ, ಡಾ. ರೋಹಿಣಿ, ರಾಜಶೇಖರ ಚಿಂಚೋಳಿ, ಚಂದ್ರು ಹದಿಮೂರ, ಡಾ. ಸುಧಾಕರ್ ರಾಥೋಡ್, ಸಂತೋಷ್ ಪವಾರ್, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Tags:

error: Content is protected !!