ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದ್ದರಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯ ವೇಳೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಯಾವುದೇ ರೋಗಿ ಇಲ್ಲದ ಕಾರಣ ಭಾರಿ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆಪರೇಷನ್ ಥಿಯೇಟರ್ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡು, ಬಳಿಕ ಅಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಪರಿಣಾಮ ಇಡೀ ಶಸ್ತ್ರಚಿಕಿತ್ಸಾ ಕೊಠಡಿಗೆ ಬೆಂಕಿ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ. ಸ್ಫೋಟದ ತೀವ್ರತೆಗೆ ಆಪರೇಷನ್ ಥಿಯೇಟರ್ನಲ್ಲಿದ್ದ ಹೈಟೆಕ್ ಉಪಕರಣಗಳು ಸೇರಿ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿವೆ. ಅಷ್ಟೇ ಅಲ್ಲದೆ, ಥಿಯೇಟರ್ನ ಸುತ್ತಮುತ್ತಲಿನ ಕೊಠಡಿಗಳು ಸಹ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿ ತೀವ್ರ ಹಾನಿಗೊಳಗಾಗಿವೆ.
ಇನ್ನು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಪ್ರಾಣಭಯದಿಂದ ಹೊರಗೆ ಓಡಿ ಬಂದಿದ್ದಾರೆ. ಘಟನೆಯ ವೇಳೆ ಆಪರೇಷನ್ ಥಿಯೇಟರ್ನಲ್ಲಿ ಏಳೆಂಟು ಜನ ಸಿಬ್ಬಂದಿ ಇದ್ದು, ತಮ್ಮ ಪ್ರಾಣವನ್ನು ಲೆಕ್ಕಿಸದೆ ಡಿ ಗ್ರೂಪ್ ನೌಕರರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಲ್ಲರನ್ನೂ ರಕ್ಷಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮರುಜೀವ ಪಡೆದಂತಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದಾರೆ.
