ಬೆಳಗಾವಿ ಜಿಲ್ಲೆಯ ಕಿತ್ತೂರು ಮತಕ್ಷೇತ್ರದ ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿಗೆ ಶಾಸಕ ಬಾಬಾಸಾಹೇಬ್ ಪಾಟೀಲ್ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಕಟ್ಟಡಕ್ಕೆ ಶಾಸಕರು ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ.


ಕಿತ್ತೂರು ಕ್ಷೇತ್ರದ ಪ್ರಮುಖ ಪಟ್ಟಣವಾದ ಎಂ.ಕೆ.ಹುಬ್ಬಳ್ಳಿಯ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ್ ಪಾಟೀಲ್ ಐದು ಕೋಟಿ ರೂಪಾಯಿಗಳ ಭರಪೂರ ಅನುದಾನದ ಗಿಫ್ಟ್ ನೀಡಿದ್ದಾರೆ. ನೂತನ ಪಟ್ಟಣ ಪಂಚಾಯಿತಿ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಎಸ್ಐಆರ್ (SIR) ಪ್ರಕ್ರಿಯೆ ಯಶಸ್ವಿಯಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ಭಯವಿಲ್ಲದೆ ಅಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು. ಇದೇ ವೇಳೆ ಮುಂಬರುವ ದಿನಗಳಲ್ಲಿ ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಕಳೆದ 3 ವರ್ಷಗಳಲ್ಲಿ ಸರಿಸುಮಾರು 30 ರಿಂದ 35 ಕೋಟಿ ರೂಪಾಯಿಗಳಷ್ಟು ಭಾರಿ ಅನುದಾನವನ್ನು ತರಲಾಗಿದ್ದು, ಮಾದರಿ ಪಟ್ಟಣವನ್ನಾಗಿ ರೂಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮಹತ್ವದ ಕಾರ್ಯಕ್ರಮದಲ್ಲಿ ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ನೂರಾರು ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಶಾಸಕರ ಈ ಜನಪರ ಕಾರ್ಯಕ್ಕೆ ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದು, ಕಿತ್ತೂರು ಶಾಸಕರು ನಮ್ಮ ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂಚಾಯಿತಿಗೆ ನಿರಂತರವಾಗಿ ಸಾಕಷ್ಟು ಅನುದಾನವನ್ನು ನೀಡುತ್ತಾ ಅಭಿವೃದ್ಧಿಯ ಕ್ರಾಂತಿ ಸೃಷ್ಟಿಸುತ್ತಿದ್ದಾರೆ. ಇದು ಇಡೀ ಪಟ್ಟಣದ ಜನತೆಗೆ ಹರ್ಷ ತಂದಿದೆ ಎಂದು ಶಾಸಕರಿಗೆ ಧನ್ಯವಾದ ಸಮರ್ಪಿಸಿದರು.

