ರಾಜ್ಯದ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸತೀಶ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಬಿಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಅಲ್ಪಸಂಖ್ಯಾತ ಸಂಘಟನೆಗಳ ಮುಖಂಡರು ಗುರುವಾರ ಕಾಗವಾಡ ತಹಶೀಲ್ದಾರ್ ರವೀಂದ್ರ ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು.

ಕಾಗವಾಡ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಬೆಳಗಾವಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಸಂಜಯ ತಳವಲಕರ, “ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸತೀಶ ಜಾರಕಿಹೊಳಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ. ಅಂತಹವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಇದೇ ವೇಳೆ ಅವರು, ರಾಮಮಂದಿರ ನಿರ್ಮಾಣದಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಬಡ ಹಾಗೂ ದಲಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆಗಾರಿಯಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದಲಿತ ಮುಖಂಡರಾದ ನ್ಯಾಯವಾದಿ ಉಮೇಶ್ ಮನೋಜ್, ಕುಮಾರ್ ಬನಸೋಡೆ, ಅಮೀನ್ ಜಮಾದಾರ್, ರವಿ ಕಾಂಬಳೆ ಹಾಗೂ ಧಾರವಾಡ ತಾಲೂಕು ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಚಿನ್ ಪೂಜಾರಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್ಜಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ಡೋಂಡಿಮಡ್ಡಿಯ ಪುನರ್ವಸತಿ ಮನೆಗಳನ್ನು ಉಗಾರ ಬುದ್ರುಕ್ ಗ್ರಾಮ ಪಂಚಾಯಿತಿಗೆ ಹಾಗೂ ರೇಣುಕಾನಗರ ಪುನರ್ವಸತಿ ಮನೆಗಳನ್ನು ಉಗಾರ ಖುರ್ದ ಪಟ್ಟಣ ಪಂಚಾಯಿತಿಗೆ ಹಸ್ತಾಂತರಿಸಿ, ನಿವಾಸಿಗಳಿಗೆ ಇ-ಸ್ವತ್ತು ನೀಡಬೇಕು ಎಂದು ಮನವಿ ಮಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳನ್ನು ಮೇಲ್ದರ್ಜೆಗೆ ಏರಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಕರ್ನಾಟಕ ಸಚಿವ ಸಂಪುಟದಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಹಾಗೆಯೇ ಹಿರಿಯ ನಾಯಕರಾದ ಆರ್.ಬಿ. ತಿಮ್ಮಾಪುರ, ಜಮೀರ್ ಅಹ್ಮದ್ ಖಾನ್ ಹಾಗೂ ಎಚ್.ಸಿ. ಮಹದೇವಪ್ಪ ಅವರಿಗೆ ಸೂಕ್ತ ಖಾತೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಎನ್ಸಿಇಆರ್ಟಿ 7ನೇ ತರಗತಿ ಪಠ್ಯಪುಸ್ತಕದ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಎಂಬ ಪದವನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ, ಅದನ್ನು ಮರು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಎಸ್ಸಿ ಹಾಗೂ ಎಸ್ಟಿ ಸಮುದಾಯದ ಅಧಿಕಾರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ (IT) ಇಲಾಖೆಗಳ ದಾಳಿಗಳ ಮೂಲಕ ಮಾನಸಿಕ ಒತ್ತಡ ಉಂಟುಮಾಡಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿ ಈಡೇರಿಸಬೇಕು, ಇಲ್ಲವಾದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಮಚ್ಚಿಂದ್ರ ಕಾಂಡೇಕರ್, ರವಿ ಕುರ್ಣೆ, ಪೋಪಟ್ ಕಾಂಬಳೆ, ರವಿ ಕಾಂಬಳೆ, ರಘು ಕಾಂಬಳೆ, ವಕ್ರತುಂಡ ಬನಸೋಡೆ, ಶಿವಪ್ಪ ಕಾಂಬಳೆ, ಈಶ್ವರ್ ಕಾಂಬಳೆ, ಪ್ರಕಾಶ್ ಕಾಂಬಳೆ, ವಿದ್ಯಾಧರ ಧೊಂಡಾರೆ, ಬಾಳಕೃಷ್ಣ ಭಜಂತ್ರಿ ಸೇರಿದಂತೆ ಕಾಗವಾಡ ತಾಲೂಕಿನ ವಿವಿಧ ಗ್ರಾಮಗಳ ನೂರಾರು ದಲಿತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
