ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ಅಬ್ಬರಿಸುತ್ತಿದ್ದು,ಚಿಕ್ಕೋಡಿ ತಾಲೂಕಿನ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಪ್ರಮುಖ ಸೇತುವೆಯಾದ ಯಡೂರ-ಕಲ್ಲೋಳ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಗೆ ಇವತ್ತು ಬರೋಬ್ಬರಿ 53 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಯಡೂರ-ಕಲ್ಲೋಳ ಸೇತುವೆ ಮುಳುಗಡೆಯಾಗಿರುವುದರಿಂದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಯಡೂರ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ತೊಂದರೆಯಾಗಿದೆ. ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ, ಸದ್ಯ ಭಕ್ತರು ಮತ್ತು ಸಾರ್ವಜನಿಕರು ಅಂಕಲಿ ಮತ್ತು ಮಾಂಜರಿ ಗ್ರಾಮಗಳ ಮೂಲಕ ಸುತ್ತುವರಿದು ಪರ್ಯಾಯ ಮಾರ್ಗದಲ್ಲಿ ದೇವಸ್ಥಾನಕ್ಕೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.
