ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟು ಕೊಂಡು ಬಿಜೆಪಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸರ್ಕಾರವನ್ನು ವಿಸರ್ಜಿಸಿ ಹೊಸದಾಗಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಒತ್ತಾಯಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಲೋಪಗಳಾಗಿವೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಲ್ಲಿ ಕೋಟಿ ಕೋಟಿ ರೂಪಾಯಿ ದುರುಪಯೋಗವಾಗಿದ್ದು, ವಿಜಯಪುರ ಜಿಲ್ಲೆಯಲ್ಲೇ ಸುಮಾರು 5.8 ಲಕ್ಷ ಫಲಾನುಭವಿಗಳಿಗೆ ಕಳೆದ ಮೂರು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ಅವರು ಆರೋಪಿಸಿದರು. ಶಿಕ್ಷಣ ಇಲಾಖೆ ಸಂಪೂರ್ಣ ಹದಗೆಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಮೇಲೆ ನಿಯಂತ್ರಣ ಸಾಧಿಸಬೇಕು ಎಂದು ಪಟ್ಟಣಶೆಟ್ಟಿ ಆಗ್ರಹಿಸಿದರು. ಇದೇ ವೇಳೆ, ವಿಜಯಪುರ ನಗರದ ಸಬ್‌ರಿಜಿಸ್ಟ್ರಾರ್ ವಿರುದ್ಧ ಹಲವು ಆರೋಪಗಳಿದ್ದರೂ ಅವರನ್ನು ವರ್ಗಾವಣೆ ಮಾಡದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಭರತ್ ಕುಲಕರ್ಣಿ ಮಾತನಾಡಿ, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯಗಳ ವಿರುದ್ಧ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶ್ಯಾಳ, ವಿಜಯ್ ಜೋಶಿ ಇದ್ದರು.
