ನೆರೆ ರಾಜ್ಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮತ್ತು ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ನದಿಗೆ ಸದ್ಯ ಭಾರಿ ಪ್ರಮಾಣದ ಒಳಹರಿವು ಆರಂಭವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಮಹಾರಾಷ್ಟ್ರದ ಜಲಾಶಯಗಳಿಂದ ಹಾಗೂ ಮಳೆಯಿಂದಾಗಿ ಕೃಷ್ಣಾ ನದಿಗೆ ಇಂದು ೧ ಲಕ್ಷ ಕ್ಯೂಸೆಕ್‌ನಷ್ಟು ಒಳಹರಿವು ದಾಖಲಾಗಿದೆ. ಪರಿಣಾಮವಾಗಿ, ಕೃಷ್ಣಾ ನದಿಯಲ್ಲಿ ಇಂದು ಒಂದೇ ದಿನ ಬರೋಬ್ಬರಿ ೪ ಅಡಿಯಷ್ಟು ನೀರು ಏರಿಕೆ ಯಾಗಿದೆ. ಸದ್ಯ ನದಿಯ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ.
ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗಡಿ ಭಾಗದ ತಾಲೂಕುಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಸೇತುವೆಗಳು ಮುಳುಗಡೆಯಾಗಿರುವುದರಿಂದ ಹಲವು ಹಳ್ಳಿಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.
ನದಿಯ ಒಳಹರಿವು ಇದೇ ರೀತಿ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಗ್ರಾಮಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ನದಿಗೆ ಇಳಿಯದಂತೆ ಸ್ಥಳೀಯ ತಾಲೂಕು ಆಡಳಿತ ಮತ್ತು ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
