ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಕೆಲವು ರಾಜಕೀಯ ಪಕ್ಷಗಳು ವಿನಾಕಾರಣ ಅಡ್ಡಿಪಡಿಸುತ್ತಿವೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಎಲ್‌ಒ-೨ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಅಭಯ್ ಪಾಟೀಲ್ ನೇತೃತ್ವದ ಬಿಜೆಪಿ ನಿಯೋಗವು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆ ಕಮಿಷನರ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಶಾಸಕ ಅಭಯ್ ಪಾಟೀಲ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಬಿಎಲ್‌ಒ-೨ ಅಧಿಕಾರಿಗಳಿಗೆ ಮನೆ ಮನೆಗೆ ತೆರಳಿ ಫಾರಂಗಳನ್ನು ವಿತರಿಸುವ, ಭರ್ತಿ ಮಾಡುವ ಹಾಗೂ ಪ್ರತಿದಿನ ೨೦ ಫಾರಂಗಳನ್ನು ಸಂಗ್ರಹಿಸುವ ಪೂರ್ಣ ಅಧಿಕಾರವಿದೆ. ಆದರೆ ಕೆಲವು ಪಕ್ಷಗಳ ಕಾರ್ಯಕರ್ತರು ಅಧಿಕಾರಿಗಳ ಕರ್ತವ್ಯದ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದು, ಅವರಿಗೆ ಬೆದರಿಕೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಭಾರತೀಯ ಜನತಾ ಪಾರ್ಟಿ ವತಿಯಿಂದ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಈಗಾಗಲೇ ಪ್ರತಿಯೊಂದು ವಾರ್ಡ್‌ಗಳಲ್ಲೂ ಸಹಾಯವಾಣಿ ಕೇಂದ್ರಗಳನ್ನು ತೆರೆದು ನಾಗರಿಕರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದರು.
ಅಧಿಕಾರಿಗಳ ಕೆಲಸದ ಬಗ್ಗೆ ಯಾವುದೇ ಗೊಂದಲಗಳಿದ್ದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬಗೆಹರಿಸಿಕೊಳ್ಳಬೇಕು ಎಂದರು. ಅದನ್ನು ಬಿಟ್ಟು ಬಿಎಲ್‌ಒ ಸಿಬ್ಬಂದಿಗೆ ಬೆದರಿಕೆ ಹಾಕಿ ಕೆಲಸಕ್ಕೆ ಅಡ್ಡಿಪಡಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇನ್ನು ಮುಂದೆ ಯಾರಾದರೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದರೆ ಅಥವಾ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಭಯ್ ಪಾಟೀಲ್ ಎಚ್ಚರಿಸಿದ್ದಾರೆ.
