Belagavi

ಬೆಳಗಾವಿಯಲ್ಲಿ ಮಳೆರಾಯನ ಆರ್ಭಟ: 36 ಗಂಟೆಗಳಿಂದ ಕತ್ತಲಲ್ಲಿ ಆಂಜನೇಯ ನಗರ, ಹೆಸ್ಕಾಂ ವಿರುದ್ಧ ಸಾರ್ವಜನಿಕರ ಉಗ್ರ ಪ್ರತಿಭಟನೆ!

Share

ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಸಾರ್ವಜನಿಕ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಈಗ ಬೀದಿಗೆ ಇಳಿದು ಆಕ್ರೋಶ ಹೊರಹಾಕುತ್ತಿದ್ದಾರೆ.

ಬೆಳಗಾವಿಯ ಆಂಜನೇಯ ನಗರದ ಸೆಕ್ಟರ್ 10ರಲ್ಲಿ ಕಳೆದ 36 ಗಂಟೆಗಳಿಂದ ಸತತವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯ ನೆಪವೊಡ್ಡಿ ವಿದ್ಯುತ್ ಕೈಕೊಟ್ಟ ಹಿನ್ನೆಲೆಯಲ್ಲಿ ಇಡೀ ಪ್ರದೇಶ ಕತ್ತಲಲ್ಲಿ ಮುಳುಗಿದೆ. ಇಷ್ಟೇ ಅಲ್ಲದೆ, ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದು, ಇತ್ತೀಚಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಬಂದೊದಗಿರುವುದಕ್ಕೆ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನವೇ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತ ಸ್ಥಳೀಯ ನಿವಾಸಿಗಳು ರಸ್ತೆಗಿಳಿದು ಹೆಸ್ಕಾಂ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಎಚ್ಚೆತ್ತ ಹೆಸ್ಕಾಂ ಸಿಬ್ಬಂದಿಗಳು, ಕೂಡಲೇ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags:

error: Content is protected !!