“ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್ ಮತ್ತಷ್ಟು ವೇಗ ನೀಡಿದ್ದಾರೆ. ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಹಾಗೂ ಸಿಸಿ ಚರಂಡಿ ಕಾಮಗಾರಿಗೆ ಅವರು ಇಂದು ಚಾಲನೆ ನೀಡಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ಮಳೆಗಾಲದ ಸಮಸ್ಯೆಗಳಿಂದ ಶೀಘ್ರದಲ್ಲೇ ಮುಕ್ತಿ ಸಿಗಲಿದೆ.”


ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಸುಮಾರು 500 ಮೀಟರ್ ಉದ್ದದ ರಸ್ತೆ ಮತ್ತು ಸಿಸಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿದರು. ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಹಾಗೂ ಮಳೆಗಾಲದಲ್ಲಿ ನೀರು ನಿಲ್ಲದಂತೆ ತಡೆಯಲು ಈ ಸಿಸಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿ ಪೂರ್ಣಗೊಂಡರೆ, ಈ ಭಾಗದ ಜನರ ಸಂಪರ್ಕ ವ್ಯವಸ್ಥೆ ಹಾಗೂ ನೈರ್ಮಲ್ಯ ಸುಧಾರಣೆಯಾಗಿ, ಸಾರ್ವಜನಿಕರ ಜೀವನಮಟ್ಟ ಮತ್ತಷ್ಟು ಉತ್ತಮಗೊಳ್ಳಲಿದೆ.

ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಆಸೀಫ್ ಸೇಠ್, ಕ್ಷೇತ್ರದ ಮೂಲಸೌಕರ್ಯ ಬಲಪಡಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ನಿಗದಿತ ಸಮಯದೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಸ್ಥಳೀಯರ ಜೊತೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಕ್ಷೇತ್ರದ ಇತರೆ ನಾಗರಿಕ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಯುವ ನಾಯಕ ಅಮಾನ್ ಸೇಠ್, ಸ್ಥಳೀಯ ನಗರ ಸೇವಕರು, ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
