Belagavi

ಸಿಎಂ ಆದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಭೇಟಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

Share

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಇಂದು ಕುಂದಾನಗರಿ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಅವರಿಗೆ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ರಾಜ್ಯದ ಮಳೆ ಹಾಗೂ ಬೆಳೆಗಳ ಪರಿಸ್ಥಿತಿ ಅವಲೋಕಿಸಲು ಈ ಭೇಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾವಾರು ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮಳೆ ಹಾಗೂ ಬೆಳೆಗಳ ಸದ್ಯದ ಸ್ಥಿತಿಗತಿಯನ್ನು ಪರಿಶೀಲಿಸಲು ಎಲ್ಲಾ ವಿಭಾಗಗಳಿಗೆ ಭೇಟಿ ನೀಡುವ ಪ್ರಕ್ರಿಯೆಯನ್ನು ಈಗಾಗಲೇ ಬಸವಕಲ್ಯಾಣದಿಂದ ಆರಂಭಿಸಲಾಗಿದೆ. ಅಲ್ಲಿಂದ ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಪ್ರವಾಸ ಮುಗಿಸಿಕೊಂಡು ಇಂದು ಬೆಳಗಾವಿಗೆ ಆಗಮಿಸಿರುವುದಾಗಿ ಅವರು ವಿವರಿಸಿದರು.

ಇಂದು ಬೆಳಗಾವಿ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಲು ಸರ್ಕಾರದ ಪ್ರಮುಖ ಸಚಿವರುಗಳು ಕೂಡ ಜೊತೆಯಲ್ಲಿದ್ದಾರೆ ಎಂದು ಸಿಎಂ ತಿಳಿಸಿದರು. ಜಿಲ್ಲೆಯ ಎಲ್ಲಾ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿದ್ದು, ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲಾಗುವುದು. ಇದೇ ವೇಳೆ ಮಾಧ್ಯಮದವರೊಂದಿಗೂ ಸಮಾಲೋಚನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಕೋರಿ ಶುಭ ಹಾರೈಸಿದರು.

ಇದಕ್ಕೂ ಮುನ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಸ್ವಾಗತ ದೊರೆಯಿತು ಹಾಗೂ ಬೆಳಗಾವಿ ನಗರ ಪೊಲೀಸರಿಂದ ಗೌರವ ರಕ್ಷೆ (ಗಾರ್ಡ್ ಆಫ್ ಆನರ್) ನೀಡಲಾಯಿತು. ವಿಮಾನ ನಿಲ್ದಾಣದ ಹೊರಗೆ ನೆರೆದಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ‘ಡಿ.ಕೆ. ಡಿ.ಕೆ.’ ಎಂದು ಜೈಕಾರ ಕೂಗಿ ಅದ್ಧೂರಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸೀಫ್ ಸೇಠ್, ಅಶೋಕ ಪಟ್ಟಣ್, ಮಹೇಂದ್ರ ತಮ್ಮಣ್ಣವರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರು ನಾಯಕರೊಂದಿಗೆ ಒಂದೇ ಕಾರಿನಲ್ಲಿ ಬೆಳಗಾವಿ ನಗರದತ್ತ ಪ್ರಯಾಣ ಬೆಳೆಸಿದರು.

Tags:

error: Content is protected !!