ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕಳೆದ 12 ಗಂಟೆಗಳಲ್ಲಿ ಭಾರಿ ಪ್ರಮಾಣದ ನೀರು ಹೆಚ್ಚಳವಾಗಿ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.


ಕೃಷ್ಣಾ ನದಿಯಲ್ಲಿ ನಿನ್ನೆ 1 ಲಕ್ಷ 19 ಸಾವಿರ ಕ್ಯೂಸೆಕ್ ಇದ್ದ ನೀರಿನ ಹರಿವು, ಇಂದು ಮಹಾರಾಷ್ಟ್ರದಿಂದ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ 1 ಲಕ್ಷ 34 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸದ್ಯ ಹಿಪ್ಪರಗಿ ಡ್ಯಾಂನಿಂದ 1 ಲಕ್ಷ 33 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ರಬಕವಿ-ಬನಹಟ್ಟಿ ಹಾಗೂ ಜಮಖಂಡಿ ತಾಲೂಕಿನ ನದಿ ತೀರದ ತಗ್ಗು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಜಮಖಂಡಿ ತಾಲೂಕಿನ ಕಂಕನವಾಡಿ ನಡುಗಡ್ಡೆಯ ಸುತ್ತಮುತ್ತಲಿನ ರೈತರ ನೂರಾರು ಎಕರೆ ಕಬ್ಬು, ಮೆಕ್ಕೆಜೋಳ ಹಾಗೂ ಸೋಯಾಬಿನ್ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ನಡುಗಡ್ಡೆ ಪ್ರದೇಶದ ಜನರಲ್ಲಿ ಪ್ರವಾಹದ ಭೀತಿ ದಿನೇ ದಿನೇ ಹೆಚ್ಚಾಗುತ್ತಿದೆ.
