ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಅಭಿಯಾನದ ಅಂಗವಾಗಿ ಬೆಳಗಾವಿ ಉತ್ತರ ವಲಯದ ಐದು ಜಿಲ್ಲೆಗಳಲ್ಲಿ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಸಂದೀಪ್ ಪಾಟೀಲ್, ತಿಳಿಸಿದರು. ಬುಧವಾರ ವಿಜಯಪುರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯಗಳ ಬಳಕೆಯನ್ನು ತಡೆಗಟ್ಟಲು ಹಾಗೂ ಯುವಜನರನ್ನು ಅದರ ದುಷ್ಪರಿಣಾಮಗಳಿಂದ ದೂರವಿಡಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಲ್ಲಿ ಮಾದಕ ದ್ರವ್ಯಗಳ ವಿರುದ್ಧ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಳಗಾವಿ ಉತ್ತರ ವಲಯದ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಈ ಅಭಿಯಾನದಲ್ಲಿ ಪೊಲೀಸ್ ಇಲಾಖೆ, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಜಾಗೃತಿ ಕಾರ್ಯಕ್ರಮಗಳು, ಸಂವಾದ, ಪ್ರತಿಜ್ಞಾ ಸ್ವೀಕಾರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.
