ರಾಜ್ಯದಲ್ಲಿ ನಡೆಯುತ್ತಿರುವ ಎನ್.ಎಸ್.ಐ.ಆರ್. (NSIR) ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಿತ್ತೂರು ಕರ್ನಾಟಕ ಉಸ್ತುವಾರಿ ಡಾ. ಅಂಜಲಿ ನಿಂಬಾಳ್ಕರ್ ಬೆಳಗಾವಿಯಲ್ಲಿ ಮಹತ್ವದ ಮಾಧ್ಯಮಗೋಷ್ಟಿಯನ್ನು ನಡೆಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿದ್ದರೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ತೊಂದರೆಯಾಗಬಹುದು ಎಂದು ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.


ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾತನಾಡಿದ ಡಾ. ಅಂಜಲಿ ನಿಂಬಾಳ್ಕರ್, ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಈಗಾಗಲೇ ಶೇ. 60 ರಿಂದ 70 ರಷ್ಟು ಡಿಜಿಟಲೈಸೇಶನ್ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು. ಉಳಿದಿರುವ ಶೇ. 25 ರಿಂದ 30 ರಷ್ಟು ಕೆಲಸವನ್ನು ಶೀಘ್ರದಲ್ಲೇ ಮುಗಿಸಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಅವರು ಸೂಚನೆ ನೀಡಿದರು. ಮತದಾರರ ಪಟ್ಟಿಯಲ್ಲಿ ಇನ್ನು ಹೆಸರಿಲ್ಲದವರು (Unmapped Voters) ಅಗತ್ಯ ದಾಖಲೆಗಳೊಂದಿಗೆ ‘ಫಾರ್ಮ್ ನಂಬರ್ 6’ ಭರ್ತಿ ಮಾಡಬೇಕು. ಒಂದು ವೇಳೆ ಬೂತ್ ಮಟ್ಟದಲ್ಲಿ ಬಿಎಲ್ಎ ಅಥವಾ ಬಿಎಲ್ಒಗಳು ಲಭ್ಯವಿಲ್ಲದಿದ್ದರೆ, ನೇರವಾಗಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಪ್ರಕ್ರಿಯೆಯನ್ನು ಸಾರ್ವಜನಿಕರು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದ ಡಾ. ಅಂಜಲಿ ನಿಂಬಾಳ್ಕರ್, ಕೇಂದ್ರದ ಬಿಜೆಪಿ ಸರ್ಕಾರವು ಜನರ ಮತದಾನದ ಹಕ್ಕನ್ನು ಕಸಿದುಕೊಂಡು, ಭವಿಷ್ಯದಲ್ಲಿ ಪೌರತ್ವದ ಮೇಲೆಯೇ ಶಂಕೆ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎಂದು ಆರೋಪಿಸಿದರು. ಬಿಹಾರ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳನ್ನು ನಾವು ಈಗಾಗಲೇ ನೋಡಿದ್ದೇವೆ ಎಂದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಹಣ ನೇರವಾಗಿ ಖಾತೆಗೆ ಜಮೆಯಾಗಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿದೆ ಎಂದರು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಗ್ಯಾರಂಟಿ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಬೈಟ್
ಮಾಧ್ಯಮಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರು ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
