ರಾಜ್ಯದಲ್ಲಿ ಬಾಕಿ ಉಳಿದಿರುವ ಮಹಾನಗರ ಪಾಲಿಕೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಸಕ್ತ ವರ್ಷದ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿಗದಿತ ಸಮಯದೊಳಗೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಆರಂಭದಲ್ಲಿ ಆಗಸ್ಟ್ ೩೧ರೊಳಗೆ ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತಾದರೂ, ತಾಂತ್ರಿಕ ಕಾರಣಗಳು ಹಾಗೂ ಮೀಸಲಾತಿ ಗೊಂದಲಗಳಿಂದಾಗಿ ಕೋರ್ಟ್ನಿಂದ ಹೆಚ್ಚುವರಿ ಕಾಲಾವಕಾಶ ಕೋರಲಾಗಿತ್ತು. ಆದರೆ ಯಾವುದೇ ಕಾರಣಕ್ಕೂ ಇನ್ನು ಮುಂದೆ ಚುನಾವಣೆಗಳನ್ನು ಮುಂದೂಡುವುದಿಲ್ಲ ಮತ್ತು ಡಿಸೆಂಬರ್ ಒಳಗಾಗಿ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೈಟ್
ಕೇವಲ ಬೆಂಗಳೂರು ಪಾಲಿಕೆ ಮಾತ್ರವಲ್ಲದೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಎಲ್ಲಾ ಮುನ್ಸಿಪಲ್ ಕಾರ್ಪೊರೇಷನ್ಗಳ ಚುನಾವಣೆಗಳನ್ನು ಪೂರ್ಣಗೊಳಿಸಲು ಇಲಾಖೆ ಸಜ್ಜಾಗಿದೆ. ಸಂವಿಧಾನದ ೭೩ ಮತ್ತು ೭೪ನೇ ತಿದ್ದುಪಡಿಯ ಆಶಯದಂತೆ ಸ್ಥಳೀಯ ಆಡಳಿತದಲ್ಲಿ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಆಡಳಿತಾಧಿಕಾರಿಗಳ ಆಡಳಿತವನ್ನು ಕೊನೆಗೊಳಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾಯಿತ ಪ್ರತಿನಿಧಿಗಳ ಕೈಗೆ ಅಧಿಕಾರ ನೀಡಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಬೈಟ್
