ಧಾರವಾಡದ ವೈದ್ಯನ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದ ಹಿಂದೆ ಗಂಡ-ಹೆಂಡತಿ ಕಲಹವೇ ಪ್ರಮುಖ ಕಾರಣ ಎಂಬ ಪ್ರಾಥಮಿಕ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಪೂರ್ವಯೋಜಿತ (ವೆಲ್ ಪ್ಲ್ಯಾನ್ಡ್) ಕೊಲೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಹೇಳಿದರು.ಪ್ರಕರಣದ ಆರೋಪಿ ಪ್ರಿಯಾಂಕಾ ತನ್ನ ಮಗುವಿಗೂ ಇನ್ಸುಲಿನ್ ಇಂಜೆಕ್ಷನ್ ನೀಡಿದ್ದಾಳೆ. ತಾನೂ ಸಹ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಂಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳೆ ಎಂದು ಕಮಿಷನರ್ ಮಾಹಿತಿ ನೀಡಿದರು.
ಸದ್ಯ ಮಗು ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆರೋಪಿ ಪ್ರಿಯಾಂಕಾ ಕೂಡ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ಬಳಿಕ ಆಕೆಯ ಹೇಳಿಕೆ ದಾಖಲಿಸಿಕೊಂಡು ಕೊಲೆಯ ನಿಖರ ಕಾರಣವನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿಸಿದರು.ಪ್ರಾಥಮಿಕ ತನಿಖೆಯಲ್ಲಿ ಹತ್ಯೆ ನಡೆದ ವೇಳೆ ಮನೆಯೊಳಗೆ ಗಂಡ, ಹೆಂಡತಿ ಮತ್ತು ಮಗು ಮಾತ್ರ ಇದ್ದರು. ಹೊರಗಿನಿಂದ ಯಾರೂ ಪ್ರವೇಶಿಸಿಲ್ಲ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಕಮಿಷನರ್ ಹೇಳಿದರು.
ಇದೇ ವೇಳೆ, ಮೃತ ವೈದ್ಯರ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
