Belagavi

ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಡಿಸಿಗೆ ಮನವಿ ಸಲ್ಲಿಸಿದ ಮಾಧ್ಯಮಿಕ ಶಾಲಾ ನೌಕರರ ಸಂಘ

Share

ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಪ್ರಮುಖವಾಗಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.

ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ ಬೆಳಗಾವಿ ಹಾಗೂ ಶೈಕ್ಷಣಿಕ ಜಿಲ್ಲಾ ಘಟಕ ಚಿಕ್ಕೋಡಿ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸದಾಶಿವ ಈರೇಶ ಸಂಬಾಳ ಅವರು ನಿವೃತ್ತಿಯ ನಂತರ ಪಿಂಚಣಿ ಸೌಲಭ್ಯವಿಲ್ಲದೆ ಅನೇಕ ಶಿಕ್ಷಕರು ಜೀವನ ಸಾಗಿಸಲು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಕುರಿತು ಹಲವು ವರ್ಷಗಳಿಂದ ಸರ್ಕಾರದ ಗಮನ ಸೆಳೆಯಲು ಸಂಘದ ವತಿಯಿಂದ ನಿರಂತರವಾಗಿ ಮನವಿಗಳನ್ನು ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಶಿಕ್ಷಕರ ಕಲ್ಯಾಣ ಮತ್ತು ನಿವೃತ್ತಿಯ ನಂತರದ ಆರ್ಥಿಕ ಭದ್ರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು, ಸಂಘ ಮಂಡಿಸಿರುವ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಅನುಷ್ಠಾನಗೊಳಿಸಬೇಕು ಶಿಕ್ಷಕರ ನ್ಯಾಯಸಮ್ಮತ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಹೋರಾಟದಲ್ಲಿ ಮಾತನಾಡಿದ ಹುಕ್ಕೇರಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಸದಸ್ಯರಾದ ರಮೇಶ್ ಬಡಿಗೇರ್, ಒಬ್ಬ ಶಿಕ್ಷಕ ತನ್ನ ಇಡೀ ಜೀವನವನ್ನು ಶಿಕ್ಷಣಕ್ಕಾಗಿ ಮುಡುಪಾಗಿಟ್ಟು ನಿವೃತ್ತಿಯಾದ ನಂತರ ಯಾವುದೇ ಆರ್ಥಿಕ ಭದ್ರತೆ ಇಲ್ಲದಿದ್ದರೆ ಅವರ ಬದುಕು ಅತ್ಯಂತ ಶೋಚನೀಯವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಇಳಿ ವಯಸ್ಸಿನಲ್ಲಿ ಶಿಕ್ಷಕರ ಜೀವನಕ್ಕೆ ಆಸರೆಯಾಗುವ ಪಿಂಚಣಿ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸುವವರೆಗೂ ಬಸವರಾಜ ಹೊರಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಇನ್ನೋರ್ವರು ಮಾತನಾಡಿ, ನಿವೃತ್ತಿಯ ನಂತರ ಯಾವುದೇ ಆರ್ಥಿಕ ಭದ್ರತೆ ಇಲ್ಲದೆ ನೌಕರರು ಇಳಿ ವಯಸ್ಸಿನಲ್ಲಿ ತೀವ್ರ ಕಷ್ಟ ಎದುರಿಸುತ್ತಿದ್ದು, ಪಿಂಚಣಿ ಜಾರಿಯು ಅವರ ಬದುಕಿಗೆ ಅತ್ಯಗತ್ಯವಾಗಿದೆ ಎಂದು ಹೇಳಿದರು. ಒಂದು ವೇಳೆ ಸರ್ಕಾರ ತಕ್ಷಣವೇ ಈ ಯೋಜನೆ ಜಾರಿಗೊಳಿಸದಿದ್ದರೆ ಮುಂಬರುವ ದಿನಗಳಲ್ಲಿ ಶಿಕ್ಷಕರು ಮತ್ತು ನೌಕರರು ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಈ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಮಾಧ್ಯಮಿಕ ಶಾಲಾ ನೌಕರರ ಸಂಘದ ಪದಾದಿಕಾರಿಗಳು ಮತ್ತು ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!