Belagavi

ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಖಂಡನೆ

Share

ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಮುಖಂಡರು ಬಾರಕೋಲು ಹಿಡಿದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ತಿಂಗಳಿಂದ ಕರ್ನಾಟಕ ಹಾಗೂ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಭಾವದಿಂದಾಗಿ ಭೀಕರ ಬರಗಾಲ ಸೃಷ್ಟಿಯಾಗಿದ್ದು, ರೈತರ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಎಂದು ಮಾಜಿ ಎಂಎಲ್‌ಸಿ ಮಹಾಂತೇಶ್ ಕವಟಗಿಮಠ್ ಕಳವಳ ವ್ಯಕ್ತಪಡಿಸಿದ್ದಾರೆ. ಜಲಾಶಯಗಳಲ್ಲಿ ಕುಡಿಯುವ ನೀರಿಲ್ಲದೆ, ಮೇವಿನ ತೀವ್ರ ಕೊರತೆ ಎದುರಾಗಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳು ತಾಲೂಕುಗಳಿಗೆ ಭೇಟಿ ನೀಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮುಖ್ಯಮಂತ್ರಿಗಳು ತಡವಾಗಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಕೃಷಿ ಸಚಿವರು ಈ ಭಾಗದತ್ತ ಮುಖ ಮಾಡಿಲ್ಲ. ಸರ್ಕಾರದ ಸಚಿವರು ಹಾಗೂ ಶಾಸಕರು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಚಿವ ಸಂಪುಟ ವಿಸ್ತರಣೆಯಲ್ಲೇ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಿದ ಅವರು, ಬೆಳಗಾವಿ ಜಿಲ್ಲೆಯ ಪ್ರಮುಖ ಬೆಳೆಯಾದ ಕಬ್ಬಿಗೆ ‘ದೊಣ್ಣೆ ಹುಳು’ ರೋಗ ತಗುಲಿದ್ದು, ರೈತರ ರಕ್ಷಣೆಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಮೂರು ವರ್ಷಗಳ ಕಾಲ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಅವರು ಸಂಚು ರೂಪಿಸುವುದರಲ್ಲೇ ಕಾಲ ಕಳೆದರು. ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಮೇಲೆ, ತಾವೂ ಸಚಿವರಾಗಬೇಕೆಂದು ಕಾಂಗ್ರೆಸ್ ಶಾಸಕರು ದೆಹಲಿಗೆ ಓಡುತ್ತಿದ್ದಾರೆ ಎಂದು ಟೀಕಿಸಿದರು. ಈ ಹಿಂದೆ ಅಹಿಂದ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದ ಸಿದ್ದರಾಮಯ್ಯನವರು ಎಸ್‌ಸಿ-ಎಸ್ಟಿ ಇಲಾಖೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ದೊಡ್ಡ ದೊಡ್ಡ ಕನಸುಗಳನ್ನು ತೋರಿಸುತ್ತಿದ್ದು, ಅವರು ಕೇವಲ ಬೆಂಗಳೂರಿಗೆ ಅಷ್ಟೇ ಅಲ್ಲ, ಇಡೀ ಕರ್ನಾಟಕಕ್ಕೆ ‘ರಿಯಲ್ ಎಸ್ಟೇಟ್ ಮುಖ್ಯಮಂತ್ರಿ’ ಆಗಿದ್ದಾರೆ ಎಂದು ಜರಿದರು. ಬೈಟ್
ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ್ ಅವರು ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರವಿದ್ದಾಗಲೂ ರೈತರನ್ನು ಕಷ್ಟಕ್ಕೆ ದೂಡುವ ಕೆಲಸ ನಡೆದಿತ್ತು, ಈಗ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲೂ ಅದೇ ಧೋರಣೆ ಮುಂದುವರಿದಿದೆ. ಕಾಂಗ್ರೆಸ್ ನಾಯಕರು ಕೇವಲ ಅಧಿಕಾರಕ್ಕಾಗಿ ಹೊಡೆದಾಡುತ್ತಿದ್ದಾರೆಯೇ ಹೊರತು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ರೈತರ ಮಕ್ಕಳಿಗಾಗಿ ಸ್ಕಾಲರ್‌ಶಿಪ್ ಯೋಜನೆಯನ್ನು ಸರ್ಕಾರ ಪುನಃ ಜಾರಿಗೆ ತರಬೇಕು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಬೇಕು ಎಂದು ಬಿಜೆಪಿ ಗ್ರಾಮೀಣ ಜಿಲ್ಯಾಧ್ಯಕ್ಷ ಸುಭಾಷ್ ಪಾಟೀಲ್ ಒತ್ತಾಯಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ಖಂಡಿಸಿ ಹಾಗೂ ರೈತರ ಪರವಾಗಿ ಹೋರಾಟ ಮಾಡುವವರ ಮೇಲೆ ಬಿಡದಿಯಲ್ಲಿ ಸರ್ಕಾರ ಸುಳ್ಳು ಮೊಕದ್ದಮೆಗಳನ್ನು ಹೂಡುತ್ತಿದ್ದು, ತಕ್ಷಣವೇ ಆ ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದರು. ಪ್ರಸ್ತುತ ರೈತರು ತೀವ್ರ ಸಂಕಷ್ಟದಲ್ಲಿದ್ದು, ಬಿತ್ತನೆ ಮಾಡಿದರೂ ಮಳೆಯಾಗದೆ ಬೆಳೆಗಳು ನಾಶವಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣವೇ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಮುಖಂಡರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!