ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ನೀಡಿದರೂ ಅವರು ನಮ್ಮವರೇ ಆಗಿದ್ದು, ಜಿಲ್ಲೆಯ ಮೂವರು ನಾಯಕರ ಹೆಸರುಗಳು ಚರ್ಚೆಯಲ್ಲಿವೆ. ಅವರಲ್ಲಿ ಯಾರಿಗೆ ಅವಕಾಶ ದೊರೆತರೂ ಬೆಳಗಾವಿ ಜಿಲ್ಲೆಗೆ ಒಳ್ಳೆಯದಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿದ್ದು, ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಿದೆ. ಬೆಂಗಳೂರು ನಗರ ದೊಡ್ಡ ಪ್ರದೇಶವಾಗಿರುವುದರಿಂದ ಅಲ್ಲಿನ ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡುತ್ತಾರೆ. ಬೆಳಗಾವಿ ಭಾಗದ ಮುಸ್ಲಿಂ ಸಮುದಾಯಕ್ಕೂ ಅವಕಾಶ ದೊರೆಯುತ್ತದೆಯೇ ಎಂಬುದು ಹೈಕಮಾಂಡ್‌ನ ಅಂತಿಮ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಅದಕ್ಕಾಗಿ ಕಾದು ನೋಡಬೇಕಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಗೆ ಸದ್ಯಕ್ಕೆ ಒಂದು ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಹಿರಿಯ ನಾಯಕರ ಅನುಭವ, ಪ್ರಾದೇಶಿಕ ಸಮತೋಲನ ಸೇರಿದಂತೆ ಎಲ್ಲ ಅಂಶಗಳನ್ನು ಅಳೆದು-ತೂಗಿ ಹೈಕಮಾಂಡ್ ಸಚಿವ ಸ್ಥಾನಗಳನ್ನು ಅಂತಿಮಗೊಳಿಸಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಡ್ರಗ್ಸ್ ವಿರುದ್ಧ ನಗರ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿಯೂ ಜಾಗೃತಿ ಅಭಿಯಾನ ನಡೆಸಲಾಗುವುದು. ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಸರ್ಕಾರ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ವಿದೇಶಗಳಿಂದ ಅಕ್ರಮವಾಗಿ ಡ್ರಗ್ಸ್ ಪೂರೈಕೆಯಾಗುತ್ತಿದ್ದು, ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳಲ್ಲಿ ದೊಡ್ಡ ಜಾಲ ಬೆಳೆದಿದೆ. ಕರ್ನಾಟಕ ಮಾರ್ಗವಾಗಿ ಕೇರಳಕ್ಕೆ ಡ್ರಗ್ಸ್ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದ್ದು, ಅಕ್ರಮ ಸಾಗಾಟದ ವೇಳೆ ರಾಜ್ಯದಲ್ಲಿ ಹಲವು ಬಾರಿ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.
ನೀಟ್ ಅಕ್ರಮ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಬೇಕು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರತಿಭಟನೆಯಲ್ಲಿ ಭಾಗವಹಿಸಿರುವವರು ವಿದ್ಯಾರ್ಥಿಗಳೇ ಹೊರತು ರಾಜಕೀಯ ಮುಖಂಡರಲ್ಲ ಎಂದು ಹೇಳಿದರು.
ಬರ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ಬರದ ಸ್ಥಿತಿಗತಿ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬರ ಘೋಷಣೆಗೆ ಕೇಂದ್ರದ ಅನುಮೋದನೆಯೂ ಅಗತ್ಯವಾಗಿದೆ ಎಂದು ತಿಳಿಸಿದರು.
ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈಗಾಗಲೇ ಅಧಿಕಾರಿಗಳಿಗೆ ಬರ ಪರಿಸ್ಥಿತಿಯ ಕುರಿತು ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು
