Vijaypura

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಪ್ರಗತಿಪರ ವಕೀಲರ ಪ್ರತಿಭಟನೆ

Share

ದಿಲ್ಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷಾ ಅವ್ಯವಹಾರ ಹಾಗೂ ಇತರ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆಸಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಪ್ರಗತಿಪರ ವಕೀಲರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರಗತಿಪರ ವಕೀಲರು ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿ, ವಿದ್ಯಾರ್ಥಿಗಳ ಮೇಲೆ ನಡೆದ ಬಲಪ್ರಯೋಗವು ಪ್ರಜಾಪ್ರಭು ತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರ ರನ್ನು ಉದ್ದೇಶಿಸಿ ಮಾತನಾಡಿದ ವಕೀಲರು, ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಖಂಡನೀಯ. ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಮರ್ಥಿಸ ಲಾಗುವುದಿಲ್ಲ ಎಂದು ಹೇಳಿದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA), ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ (SCAORA) ಸೇರಿದಂತೆ ದೇಶದ 650ಕ್ಕೂ ಹೆಚ್ಚು ಹಿರಿಯ ವಕೀಲರು ಹಾಗೂ ನ್ಯಾಯವಾದಿಗಳ ಸಂಘಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ, ದಿಲ್ಲಿ ಪೊಲೀಸರ ಕ್ರಮದ ಬಗ್ಗೆ ನಿಷ್ಪಕ್ಷಪಾತ ಮತ್ತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿರುವುದನ್ನು ಅವರು ಉಲ್ಲೇಖಿಸಿದರು. ವಿದ್ಯಾರ್ಥಿಗಳ ಸಂವಿಧಾನಬದ್ಧ ಪ್ರತಿಭಟನಾ ಹಕ್ಕನ್ನು ಗೌರವಿಸಬೇಕು. ಪೊಲೀಸ್ ದೌರ್ಜನ್ಯದ ಕುರಿತು ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರಗತಿಪರ ವಕೀಲರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರಗತಿಪರ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Tags:

error: Content is protected !!