ಬಿಜೆಪಿ ಶಾಸಕ ಬಿ.ಪಿ. ಹರೀಶ್ ಸೇರಿದಂತೆ ಪಕ್ಷದ ಮುಖಂಡರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ, ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ತೀವ್ರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಠಿಣ ಶಬ್ದಗಳಿಂದ ವಾಗ್ದಾಳಿ ನಡೆಸಿದ ನಾಯಕರು, ರಾಜ್ಯದಲ್ಲಿ ‘ಗೂಂಡಾ ಸರ್ಕಾರ’ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.


ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಹರಿಹರ ಶಾಸಕ ಬಿ.ಪಿ. ಹರೀಶ್ ಹಾಗೂ ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಆವರಣದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಶಾಸಕರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಬಿ.ವೈ. ವಿಜಯೇಂದ್ರ, ನೀಟ್ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ತನ್ಞ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಶಾಸಕರ ಮೇಲೆ ಹಲ್ಲೆಗೆ ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಬೆಂಬಲಿತ ದೇಶವಿರೋಧಿ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದರು. ರಾಹುಲ್ ಗಾಂಧಿ ಅವರು ದೇಶದ್ರೋಹಿ ಮತ್ತು ‘ಕಾಕ್ರೋಜ್ ಪಾರ್ಟಿ’ಗಳಂತಹ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಿದ್ದು, ಪ್ರಧಾನಿ ಕಾರ್ಯಾಲಯದ ಎದುರು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಂಸತ್ತಿನಲ್ಲಿ ಅಥವಾ ರಸ್ತೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವುದೇ ಅರ್ಹತೆಯಿಲ್ಲ ಎಂದು ಲೇವಡಿ ಮಾಡಿದ ಅಶೋಕ್, ರಾಜ್ಯದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣವಾಗಿ ಕುಸಿದುಬಿದ್ದಿದೆ ಎಂದು ದೂರಿದರು.
