ವಿಜಯಪುರ ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಜಯಪುರ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಸದಸ್ಯರು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಹಲವು ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಶೇಕಡಾವಾರು ಪ್ರಗತಿ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮನೆ ಮನೆಗೆ ಭೇಟಿ ನೀಡದೆ, “ಮನೆಗಳು ಸಿಗುತ್ತಿಲ್ಲ” ಅಥವಾ “ಬೇರೆಡೆ ಮತದಾರರಾಗಿದ್ದಾರೆ” ಎಂಬ ಕಾರಣಗಳನ್ನು ದಾಖಲಿಸಿ, ತರಾತುರಿಯಲ್ಲಿ ಪಂಚರರ ಸಹಿ ಪಡೆದು ವರದಿ ಸಲ್ಲಿಸುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದರು.
ಈ ಕುರಿತು ಸಮಗ್ರ ತನಿಖೆ ನಡೆಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ, ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ, ಮಲ್ಲಿಕಾರ್ಜುನ ಗಡಗಿ, ರಾಜು ಕುರಿಯವರ ಹಾಗೂ ಶಂಕರ ಹೂಗಾರ ಉಪಸ್ಥಿತರಿದ್ದರು.
