Vijaypura

ಆಲಮಟ್ಟಿಯಲ್ಲಿ ಜಲಸಿರಿ; ಉತ್ತರ ಕರ್ನಾಟಕಕ್ಕೆ ನೆಮ್ಮದಿ; ಭರ್ತಿಯಾಗುವ ಹಂತದಲ್ಲಿ ಆಲಮಟ್ಟಿ ಜಲಾಶಯ

Share

ಒಂದೆಡೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದ ಬರದ ಆತಂಕ ಮನೆ ಮಾಡಿದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಉತ್ತರ ಕರ್ನಾಟಕದ ರೈತರಲ್ಲಿ ಹೊಸ ಭರವಸೆ ಮೂಡಿದೆ. ಈ ಕುರಿತು ಒಂದು ವರದಿ ಇಲ್ಲಿದೆ…

ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದರೂ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ವರದಾನವಾಗಿದೆ. ಕೃಷ್ಣಾ ನದಿಯ ಮೂಲಕ ನಿರಂತರವಾಗಿ ನೀರು ಹರಿದು ಬರುತ್ತಿರುವುದರಿಂದ ಜಲಾಶಯ ವೇಗವಾಗಿ ಭರ್ತಿಯಾಗುತ್ತಿದೆ. ರಾಜ್ಯದ ಎರಡನೇ ಅತಿದೊಡ್ಡ ಜಲಾಶಯವಾದ ಆಲಮಟ್ಟಿ ಇದೀಗ ಪೂರ್ಣ ಮಟ್ಟ ತಲುಪುವ ಹಂತದಲ್ಲಿದೆ. ಇಂದಿನ ಜಲಾಶಯದ ಗರಿಷ್ಠ ನೀರಿನ ಮಟ್ಟ 519.60 ಮೀಟರ್ ಆಗಿದ್ದು, ಪ್ರಸ್ತುತ ನೀರಿನ ಮಟ್ಟ 518.58 ಮೀಟರ್ ತಲುಪಿದೆ. ಅಂದರೆ ಭರ್ತಿಯಾಗಲು ಕೇವಲ 1.02 ಮೀಟರ್ ಮಾತ್ರ ಬಾಕಿಯಿದೆ. ಜಲಾಶಯಕ್ಕೆ 73,162 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸುರಕ್ಷತಾ ದೃಷ್ಟಿಯಿಂದ 43,567 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನೀರಿನ ಹರಿವು ಇದೇ ರೀತಿ ಮುಂದುವರಿದರೆ ಇನ್ನೆರಡು ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ.

ಇನ್ನು ಆಲಮಟ್ಟಿ ಜಲಾಶಯ ಭರ್ತಿ ಯಾಗುತ್ತಿರುವುದು ವಿಜಯಪುರ, ಬಾಗಲಕೋಟೆ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ರೈತರಿಗೆ ನೆಮ್ಮದಿ ತಂದಿದೆ. ಕುಡಿಯುವ ನೀರು ಹಾಗೂ ನೀರಾವರಿ ವ್ಯವಸ್ಥೆಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಆದರೆ ಜಲಾಶಯದಿಂದ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಒಟ್ಟಾರೆ, ಬರದ ಆತಂಕದ ನಡುವೆಯೂ ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿರುವುದು ಉತ್ತರ ಕರ್ನಾಟಕದ ರೈತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಕೃಷ್ಣಾ ನದಿಯ ಹರಿವು ಇದೇ ರೀತಿ ಮುಂದುವರಿದರೆ, ಇನ್ನೇನು ಕೆಲವೇ ದಿನಗಳಲ್ಲಿ ಜಲಾಶಯ ಪೂರ್ಣ ಮಟ್ಟ ತಲುಪಿ ಈ ಭಾಗದ ಕೃಷಿ ಹಾಗೂ ಕುಡಿಯುವ ನೀರಿನ ಭದ್ರತೆಗೆ ದೊಡ್ಡ ಆಸರೆಯಾಗಲಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!