ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಹಶೀಲ್ದಾರ್ ಕಚೇರಿಯಲ್ಲಿ ಆಗಸ್ಟ್ 15, 2026ರಂದು ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ಪೂರ್ವಭಾವಿ ಸಭೆ ತಹಶೀಲ್ದಾರ್ ವೈ.ಎಸ್. ಸೋಮನಕಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ವೈ.ಎಸ್. ಸೋಮನಕಟ್ಟಿ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ವಿಜೃಂಭಣೆ ಯಿಂದ ಹಾಗೂ ವೈಭವದಿಂದ ಆಚರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದರು. ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾಗುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಥೋಡ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಗುರುಶಾಂತ್ ಗೌಡ ದಾಶ್ಯಾಳ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

