Belagavi

ಕಾವೇರಿ ನೀರು ಹರಿವು: ಸರ್ಕಾರದ ತರಾತುರಿ ನಿರ್ಧಾರಕ್ಕೆ ಬೊಮ್ಮಾಯಿ ಕಿಡಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

Share

ಸರ್ವಪಕ್ಷ ಸಭೆಗೂ ಮುನ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ, ಕಾವೇರಿ ವಿಚಾರದಲ್ಲಿ ಕೈಗೊಳ್ಳಬೇಕಾದ ಮುಂದಿನ ನಡೆಗಳ ಬಗ್ಗೆ ಚರ್ಚಿಸಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ಕಾಲುವೆಗಳಿಗೆ ನೀರು ಹರಿಸದೆ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಬಿಟ್ಟು ಸಾಧನೆ ಎಂದು ಬಿಂಬಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸರ್ವಪಕ್ಷ ಸಭೆಗೂ ಮುನ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಸರ್ವಪಕ್ಷ ಸಭೆ ಸೇರುವ ಬಗ್ಗೆ ತೀರ್ಮಾನ ಕೈಗೊಂಡರು. ಸಭೆಯಲ್ಲಿ ಮುಂದಿಡಬೇಕಾದ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಸುರಿದ ಮಳೆಯಿಂದಾಗಿ ಜಲಾಶಯಗಳಿಗೆ ಉತ್ತಮ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಹರಿಸಿ ಸಾಧನೆ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು.

ಕರ್ನಾಟಕದಲ್ಲಿ ವರುಣದೇವನ ಕೃಪೆಯಿಂದ ಉತ್ತಮ ಮಳೆಯಾಗಿದೆ. ಆದರೆ, ಜಲಾಶಯಗಳು ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಹರಿಸಿದೆ. ಏನೇ ಆಗಲಿ, ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಪರವಾಗಿ ವಾದ ಮಂಡಿಸಲು ನಮಗೆ ಬಲವಾದ ಅಂಶಗಳು ಲಭ್ಯವಾಗಿವೆ. ಜೂನ್ ಜುಲೈನಲ್ಲಿ ನೀರು ಬಿಡುವುದು ಅಷ್ಟೇ ಅಲ್ಲ, ಸರ್ಕಾರ ಮುಂದಿನ ದಿನಗಳಲ್ಲಿ ಕಾವೇರಿ ನೀರಿನ ನಿರ್ವಹಣೆಯನ್ನು ಹೇಗೆ ಮಾಡುತ್ತದೆ ಎಂಬುದನ್ನು ನಾವು ಕಾದು ನೋಡಬೇಕಿದೆ ಎಂದು ಹೇಳಿದರು.

ರೈತರ ಹಿತಾಸಕ್ತಿ ಕಾಯುವುದು ಮುಖ್ಯ: ಕರ್ನಾಟಕದ ಜನತೆಗೆ ಕುಡಿಯುವ ನೀರು ಒದಗಿಸುವುದು, ಬೆಂಗಳೂರು, ಮಂಡ್ಯ, ಮೈಸೂರು ಭಾಗದ ಕುಡಿಯುವ ನೀರಿನ ಅಗತ್ಯತೆ ಹಾಗೂ ನಮ್ಮ ಮುಂಗಾರು ಬೆಳೆಗೆ ನೀರು ಸುರಕ್ಷಿತವಾಗಿ ಸಿಗುವಂತೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಇಲ್ಲಿಯವರೆಗೆ ನಮ್ಮ ರೈತರ ಕಾಲುವೆಗಳಿಗೆ ಒಂದು ಹನಿ ನೀರನ್ನೂ ಹರಿಸಿಲ್ಲ. ರೈತರಿಗೆ ನೀರು ಕೊಡದೆ, ಸಾಧನೆ ಮಾಡಿದ್ದೇವೆ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

​ಸರ್ಕಾರ ಕೈಗೊಳ್ಳುವ ನಿರ್ಧಾರ ಹಾಗೂ ಸಭೆಯಲ್ಲಿ ಮಂಡಿಸುವ ಪ್ರಸ್ತಾಪಗಳನ್ನು ಗಮನಿಸಿ ಮುಂದಿನ ನಡೆ ತೀರ್ಮಾನಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

Tags:

error: Content is protected !!