ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಸ್ವಚ್ಛತೆ ಎನ್ನುವುದು ಪೂರ್ಣ ಪ್ರಮಾಣದಲ್ಲಿ ಮಾಯವಾಗಿದ್ದು, ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ದಿನ ದೂಡುವಂತಾಗಿದೆ. ಚರಂಡಿ ದುರಸ್ತಿ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಪಂಚಾಯಿತಿ ಸಂಪೂರ್ಣ ವಿಫಲವಾಗಿದ್ದು, ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದೆ. ಗ್ರಾಮದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಚರಂಡಿಗಳು ಕಸ-ಕಡ್ಡಡ ಜಟಾಪಟಿಯಿಂದ ಸಂಪೂರ್ಣವಾಗಿ ಹಾಳಾಗಿದ್ದು, ಕೊಳಚೆ ನೀರು ದುರ್ನಾತ ಬೀರುತ್ತಾ ನೇರವಾಗಿ ರಸ್ತೆಗಳ ಮೇಲೆಯೇ ಹರಿಯುತ್ತಿದೆ. ಹಲವು ಕಡೆಗಳಲ್ಲಿ ಚರಂಡಿ ನೀರು ಜನರ ಮನೆಗಳ ಅಂಗಳ ಹಾಗೂ ಹೊಸ್ತಿಲ ವರೆಗೂ ನುಗ್ಗುತ್ತಿರುವುದರಿಂದ ಗ್ರಾಮಸ್ಥರು ನಡೆದಾಡಲೂ ಸಹ ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಇದೇ ಪರಿಸ್ಥಿತಿಯ ನಡುವೆ ಗ್ರಾಮಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಅಸ್ವಚ್ಛತೆ ತಾಂಡವವಾಡುತ್ತಿದ್ದು, ಸಾರ್ವಜನಿಕರಿಗೆ ಕಲುಷಿತ ನೀರನ್ನೇ ಬಿಡುಗಡೆ ಮಾಡಲಾಗುತ್ತಿದೆ. ಕಲುಷಿತ ನೀರು ಸೇವನೆಯಿಂದಾಗಿ ಗ್ರಾಮದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲವು ಬಾರಿ ಮನವಿ ಮಾಡಿದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
