20 ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಅಸಮಾಧಾನ ಸ್ಫೋಟ; ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನ ಸಿಗದ ಹಿನ್ನೆಲೆ ಬೆಂಬಲಿಗರ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಪಟ್ಟಿ ಪ್ರಕಟವಾಗುತ್ತಿದ್ದಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅದರಲ್ಲೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಶವಂತರಾಯಗೌಡ ಪಾಟೀಲ್ ಘೋಷಿಸಿದ್ದು, ತಾವು ಹೊಂದಿರುವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಹೊಸ ರಾಜಕೀಯ ಸಮೀಕರಣದ ಆಧಾರದಲ್ಲಿ ಸಚಿವ ಸಂಪುಟ ರಚನೆ ಮಾಡಿದ್ದು, ಯಶವಂತರಾಯಗೌಡ ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವಾಕಾಂಕ್ಷಿಗಳಿಗೆ ಅವಕಾಶ ದೊರೆಯಲಿಲ್ಲ.
ಕೆಲವು ದಿನಗಳ ಹಿಂದಷ್ಟೇ ಯಶವಂತರಾಯಗೌಡ ಪಾಟೀಲ್ ಬೆಂಬಲಿಗರು ಬೆಂಗಳೂರಿನ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದರು.
ಸಂಪುಟ ವಿಸ್ತರಣೆಯ ಬಳಿಕ ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.
