Savadatti

ಸವದತ್ತಿ ಬಳಿ ರಾಜ್ಯ ಹೆದ್ದಾರಿ ತಡೆದು ರೈತರ ಉಗ್ರ ಪ್ರತಿಭಟನೆ: ಮಲಪ್ರಭಾ ಕಾಲುವೆಗೆ ನೀರು ಹರಿಸಲು ಪಟ್ಟು!

Share

ಮಲಪ್ರಭಾ ನದಿಯಿಂದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ತಕ್ಷಣವೇ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿ ನೂರಾರು ರೈತರು ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೊಟ್ಟ ಭರವಸೆ ಈಡೇರಿಸದ ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು, ರಸ್ತೆಯಲ್ಲೇ ಅಡುಗೆ ಮಾಡಿ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಲಪ್ರಭಾ ನದಿಯಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ನವಲಗುಂದ, ನರಗುಂದ ಮತ್ತು ಸವದತ್ತಿ ತಾಲೂಕಿನ ನೂರಾರು ರೈತರು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯನ್ನು ತಡೆದು ಧರಣಿ ಕುಳಿತ ರೈತರು, ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದಾಗಿ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಕಳೆದ ಹತ್ತು ದಿನಗಳ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಗಳು ಜಾನುವಾರುಗಳಿಗೆ ಕುಡಿಯಲು ಹಾಗೂ ಕೃಷಿ ಅಗತ್ಯಕ್ಕಾಗಿ 2 ಟಿಎಂಸಿ (TMC) ನೀರು ಬಿಡುವುದಾಗಿ ಭರವಸೆ ನೀಡಿದ್ದರು. ಆದರೆ, ದಿನಗಳು ಕಳೆದರೂ ಕೊಟ್ಟ ಭರವಸೆಯನ್ನು ಈಡೇರಿಸದೇ ಜಿಲ್ಲಾಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರು, ಜಿಲ್ಲಾಡಳಿತದ ರೈತವಿರೋಧಿ ನೀತಿಯನ್ನು ಖಂಡಿಸಿದರು. ಕುಡಿಯುವ ನೀರಿಲ್ಲದೇ ಜಾನುವಾರುಗಳು ಕಷ್ಟಪಡುತ್ತಿದ್ದು, ತಕ್ಷಣವೇ ಕಾಲುವೆಗಳಿಗೆ ನೀರು ಹರಿಸಲೇಬೇಕು ಎಂದು ಬಿಗಿಪಟ್ಟು ಹಿಡಿದರು.

ಇನ್ನು ನೀರಾವರಿ ಸಲಹಾ ಸಮಿತಿ (ICC) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸಮಸ್ಯೆಗಳನ್ನು ಆಲಿಸಲು ಸಮಯ ನೀಡದೆ ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ರೈತ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಅಧಿಕಾರಿಗಳ ನಿರ್ಧಾರಕ್ಕಾಗಿ ಕಾಯುವುದಾಗಿ ತಿಳಿಸಿರುವ ರೈತರು, ಒಂದು ವೇಳೆ ಸೂಕ್ತ ಪರಿಹಾರ ಸಿಗದಿದ್ದರೆ ಪ್ರತಿಭಟನಾ ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಶುಕ್ರವಾರದವರೆಗೆ ಧರಣಿ ಮುಂದುವರಿಸುವುದಾಗಿ ಅಧಿಕಾರಿಗಳು ಹಾಗೂ ಪೊಲೀಸರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!