ಚಿಕ್ಕೋಡಿ ನಗರದಲ್ಲಿ ರಸ್ತೆಗಳ ದುಸ್ಥಿತಿ ಮತ್ತೊಮ್ಮೆ ಬಯಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (RTO) ಸೇರಿದಂತೆ ಹಲವು ಸರ್ಕಾರಿ ಕಚೇರಿಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲೇ ಭಾರೀ ಗುಂಡಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಜೀವಭಯದಲ್ಲಿ ಸಂಚರಿಸುವಂತಾಗಿದೆ. ಶಾಲಾ ಮಕ್ಕಳನ್ನು ಸಾಗಿಸುವ ಆಟೋ ರಿಕ್ಷಾಗಳಿಗೂ ಈ ರಸ್ತೆ ಅಪಾಯಕಾರಿಯಾಗಿ ಪರಿಣಮಿಸಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗೀಯ ಕಾರ್ಯಾಗಾರದ ಮುಂಭಾಗದಲ್ಲಿರುವ ಈ ರಸ್ತೆ ಮುದೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯಿಂದ RTO ಕಚೇರಿ ಡಿಡಿಪಿಐ ಕಚೇರಿ ಅಗ್ನಿಶಾಮಕ ದಳ, ಖಾಸಗಿ ಶಾಲೆಗಳು ಸೇರಿದಂತೆ ಹಲವು ಪ್ರಮುಖ ಸರ್ಕಾರಿ ಕಚೇರಿಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ. ಇದೇ ರಸ್ತೆ ಚಿಕ್ಕೋಡಿ–ನಿಡಸೋಶಿ ಮೂಲಕ ಬೆಳಗಾವಿಗೆ ಸಂಪರ್ಕಿಸುವ ಮಾರ್ಗಕ್ಕೂ ಸಂಪರ್ಕ ಕಲ್ಪಿಸುತ್ತದೆ.
ಪ್ರತಿದಿನ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಭಾರೀ ಗುಂಡಿಯಿಂದ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ರಿಕ್ಷಾ ಚಾಲಕರು ಆತಂಕದಲ್ಲೇ ವಾಹನ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರು ಅಪಘಾತದ ಭೀತಿಯಲ್ಲೇ ಸಂಚರಿಸುವಂತಾಗಿದೆ.
ಸ್ಥಳೀಯರು ಹಲವು ಬಾರಿ ಗಮನ ಸೆಳೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ದಳದ ವಾಹನಗಳ ಸಂಚಾರಕ್ಕೂ ಈ ರಸ್ತೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ, ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಿಕ್ಕೋಡಿಯ ಪ್ರಮುಖ ಸರ್ಕಾರಿ ಕಚೇರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯೇ ಇಂದು ಅಪಾಯದ ರಸ್ತೆಯಾಗಿ ಮಾರ್ಪಟ್ಟಿದೆ. ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಸಂಬಂಧಪಟ್ಟ ಇಲಾಖೆ ತಕ್ಷಣ ಎಚ್ಚೆತ್ತು ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ
