ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿರುವ ಶ್ರೀ ಭವಾನಿ ಶಂಕರ ಹಾಗೂ ಶ್ರೀ ನಾರಾಯಣ ದೇವಸ್ಥಾನದ ಪುಷ್ಕರಣಿ ಬಳಿ ಅನಧಿಕೃತವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.


ಶ್ರೀರಾಮ ಸೇನೆ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಪುಷ್ಕರಣಿ ಜಾಗದ ವಿಚಾರದಲ್ಲಿ ನಿಯಮ ಉಲ್ಲಂಘಿಸಿ ರಸ್ತೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮಹಾನಗರ ಪಾಲಿಕೆಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ಕಾಮಗಾರಿಗೆ ಅನುಮತಿ ನೀಡಿರುವ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ವಿಷಯ ತಿಳಿದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದರು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸದ್ಯಕ್ಕೆ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ. ಆದರೂ ಕಾಮಗಾರಿ ಸ್ಥಳದಲ್ಲೇ ಪ್ರತಿಭಟನೆ ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪುಷ್ಕರಣಿ ಜಾಗದ ವಿಚಾರ ಇದೀಗ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಕಾಮಗಾರಿ ಮತ್ತೆ ಆರಂಭವಾಗುತ್ತದೆಯೇ ಅಥವಾ ಶಾಶ್ವತವಾಗಿ ಸ್ಥಗಿತಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ..
