Vijaypura

ವಿಜಯಪುರಕ್ಕೆ 3ನೇ ಹಂತದ ಕುಡಿಯುವ ನೀರು ಯೋಜನೆ; ಎಂ.ಬಿ. ಪಾಟೀಲ ಮನವಿಗೆ ಯತೀಂದ್ರ ಸಿದ್ದರಾಮಯ್ಯ ಸ್ಪಂದನೆ

Share

ಐತಿಹಾಸಿಕ ವಿಜಯಪುರ ನಗರಕ್ಕೆ 3ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಮಹತ್ವದ ಪ್ರಯತ್ನ ಆರಂಭವಾಗಿದೆ. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಕುಡಿಯುವ ನೀರಿನ ಭವಿಷ್ಯದ ಅಗತ್ಯತೆಗಳ ಕುರಿತು ಚರ್ಚೆ ನಡೆಯಿತು. ಈ ವೇಳೆ ಸಚಿವ ಎಂ.ಬಿ. ಪಾಟೀಲ ಅವರು 3ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯಿಸಿದ್ದು, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್….

ಐತಿಹಾಸಿಕ, ಗುಮ್ಮಟನಗರಿ ವಿಜಯಪುರ ನಗರ… ವೇಗವಾಗಿ ಬೆಳೆಯುತ್ತಿರುವ ನಗರ.
ನಗರದ ಜನಸಂಖ್ಯೆ ಹೆಚ್ಚಳದ ಜೊತೆಗೆ ಕುಡಿಯುವ ನೀರಿನ ಬೇಡಿಕೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ನಗರಕ್ಕೆ 1ನೇ ಹಾಗೂ 2ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆಗಳು ಜಾರಿಯಾಗಿವೆ. ಆದರೆ, ಭವಿಷ್ಯದ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಹಂತದ ಯೋಜನೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ಹಾಗೂ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನಗರದ ವಿವಿಧ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಇನ್ನೂ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಜಾರಿಯಾಗಿರುವ 1ನೇ ಹಾಗೂ 2ನೇ ಹಂತದ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ಯೋಜನೆಗಳು ಯಾವ ವರ್ಷದಲ್ಲಿ ಜಾರಿಯಾಗಿವೆ, ಅವುಗಳ ಮೂಲಕ ನಗರಕ್ಕೆ ಎಷ್ಟು ಪ್ರಮಾಣದ ನೀರು ಲಭ್ಯವಾಗುತ್ತಿದೆ, ಪ್ರಸ್ತುತ ನಗರದ ನೀರಿನ ಬೇಡಿಕೆ ಎಷ್ಟಿದೆ ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಅಗತ್ಯತೆಗಳೇನು ಎಂಬುದರ ಕುರಿತು ದಾಖಲೆಗಳು ಮತ್ತು ಅಂಕಿ-ಅಂಶಗಳ ಆಧಾರದ ಮೇಲೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ವಿಜಯಪುರ ನಗರಕ್ಕೆ 3ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಗೆ ತರುವ ಅಗತ್ಯತೆಯನ್ನು ಸಚಿವ ಎಂ.ಬಿ. ಪಾಟೀಲ ಅವರು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ಮನವಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಯೋಜನೆ ಮುಂದುವರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ವಿಜಯಪುರ ನಗರದ ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಹಾಗೂ ಇತರೆ ಮೂಲಸೌಕರ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ನಗರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳಿಗೆ ಸಚಿವರು ಸೂಕ್ತ ನಿರ್ದೇಶನ ನೀಡಿದರು. ಸಭೆಯಲ್ಲಿ ಮೇಯರ್ ಎನ್.ಎಸ್. ಕರಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ವಿಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪಾಲಿಕೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಒಟ್ನಲ್ಲಿ ವಿಜಯಪುರ ನಗರದ ಭವಿಷ್ಯದ ಕುಡಿಯುವ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು 3ನೇ ಹಂತದ ಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಸರ್ಕಾರದಿಂದ ಯೋಜನೆಗೆ ಹಸಿರು ನಿಶಾನೆ ಸಿಕ್ಕರೆ, ಮುಂದಿನ ದಿನಗಳಲ್ಲಿ ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆಗೆ ಮತ್ತಷ್ಟು ಬಲವಾದ ಪರಿಹಾರ ದೊರೆಯುವ ನಿರೀಕ್ಷೆಯಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!