ಧಾರವಾಡದ ನಗರ ಪ್ರದೇಶದ ತ್ಯಾಜ್ಯ ಬಳಸಿಕೊಂಡು ಶಿವಳ್ಳಿ ಗ್ರಾಮದಲ್ಲಿ ಬಯೋಗ್ಯಾಸ್ ಘಟಕ ಸ್ಥಾಪನೆಗೆ ಪಾಲಿಕೆ ಹಾಗೂ ಜಿಲ್ಲಾಡಳಿತ ಮುಂದಾಗಿರುವ ನಡೆಯನ್ನು ಖಂಡಿಸಿ, ಈಗಾಗಲೇ ಒಂದು ಸುತ್ತಿನ ಹೋರಾಟ ಮಾಡಿರುವ ಶಿವಳ್ಳಿ ಗ್ರಾಮಸ್ಥರು ಈಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಯೋಗ್ಯಾಸ್ ಘಟಕದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.


ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಯೋಗ್ಯಾಸ್ ಘಟಕ ಸ್ಥಾಪನೆಗೆ ಮುಂದಾಗಿದೆ. ಇದು ಸ್ಥಳೀಯ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ವಿರುದ್ಧ ಗ್ರಾಮದ ಜನತೆ ನಿರಂತರ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಸದ್ಯ ಗ್ರಾಮಸ್ಥರ ವಿರೋಧದ ನಡುವೆಯೂ ಘಟಕ ಸ್ಥಾಪನೆಗೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ವಿರೋಧಿಸಿ ಶಿವಳ್ಳಿ ಗ್ರಾಮಸ್ಥರು ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಘಟಕದ ಬಳಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಭಾರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಳ್ಳಿ ಗ್ರಾಮಸ್ಥರು ಘಟಕದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಘಟಕ ಸ್ಥಾಪನೆ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪಾಲಿಕೆ ಕಮಿಷನರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
