ಬೆಳಗಾವಿ ಜಿಲ್ಲೆಯ ಪ್ರಮುಖ ಜಲಾಶಯವಾದ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿರುವ ರಾಜಾ ಲಖಮಗೌಡ (ಹಿಡಕಲ್) ಜಲಾಶಯವು ಶೇ. 100 ರಷ್ಟು ಭರ್ತಿಯಾಗಿದೆ. 51 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಒಟ್ಟು 10 ಗೇಟ್‌ಗಳ ಪೈಕಿ 2 ಗೇಟ್‌ಗಳ ಮೂಲಕ ನದಿಗೆ 3 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಸದ್ಯ ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದೆ.
ಇದಲ್ಲದೆ, ವಿದ್ಯುತ್ ಉತ್ಪಾದನೆ ಹಾಗೂ ವಿವಿಧ ಕಾಲುವೆಗಳ ಮೂಲಕ ಹೆಚ್ಚುವರಿಯಾಗಿ 6 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯ ಕೋಡಿ ಬಿದ್ದು ನೀರು ಹರಿಯುತ್ತಿರುವುದರಿಂದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಸಂಪೂರ್ಣ ನಿರಾಳರಾಗಿದ್ದಾರೆ. ನದಿ ಪಾತ್ರದ ಜನರಿಗೆ ಜಾಗರೂಕರಾಗಿರುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ.
