ಬೆಳಗಾವಿ
ಕೆಪಿಎಸ್ಸಿ ನೇಮಕಾತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲೂ ಶೋಧ ಕಾರ್ಯ ಕೈಗೊಂಡಿದ್ದಾರೆ.
ಕಿತ್ತೂರು ಪಟ್ಟಣದ ಸದಾಶಿವನಗರದಲ್ಲಿರುವ ವಿಜಯಪುರ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಅಭಿಜಿತ್ ಕುಬೇರ ಜಾಗನವರ ಅವರ ನಿವಾಸದ ಮೇಲೆ ಬೆಳಂಬೆಳಗ್ಗೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
2024ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿರುವ ಅಭಿಜಿತ್ ಜಾಗನವರ ಅವರ ಮನೆಗೆ ಬೆಂಗಳೂರಿನಿಂದ ಆಗಮಿಸಿದ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೆಪಿಎಸ್ಸಿ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ವಿವಿಧ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿನ ಈ ದಾಳಿಯೂ ಮಹತ್ವ ಪಡೆದುಕೊಂಡಿದೆ. ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ದಾಳಿ ವೇಳೆ ಏನೇನು ದಾಖಲೆಗಳು ಲಭ್ಯವಾಗಿವೆ ಹಾಗೂ ಯಾವುದಾದರೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ

