ಬೆಳಗಾವಿ ಜಿಲ್ಲೆಯ ಬೈಲಹೊಂಗಲದಿಂದ ಬೆಳಗಾವಿಗೆ ಸಂಚರಿಸುವ ಕೆಎಸ್ಆರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ಖಾಸಗಿ ವ್ಯಕ್ತಿಯೊಬ್ಬ ಪ್ರಯಾಣಿಕರಿಗೆ ಟಿಕೆಟ್ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಪ್ರಶ್ನಿಸಿದ ಸಮಾಜ ಸೇವಕ ಬಾಬು ಪಾಟೀಲ್ ಅವರಿಗೆ ಬಸ್ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿವೆ. ಸರ್ಕಾರಿ ಬಸ್ಸಿನಲ್ಲಿ ಖಾಸಗಿ ವ್ಯಕ್ತಿಗೆ ಟಿಕೆಟ್ ನೀಡಲು ಅವಕಾಶ ನೀಡಿದವರಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೈಲಹೊಂಗಲ: ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಜವಾಬ್ದಾರಿಯುತ ಸಿಬ್ಬಂದಿ ಇರಬೇಕಾದ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಆಡಳಿತ ನಡೆಸುತ್ತಿರುವುದು ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೈಲಹೊಂಗಲದಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಎಕ್ಸ್ಪ್ರೆಸ್ ಬಸ್ನಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಯಲ್ಲದ ಖಾಸಗಿ ವ್ಯಕ್ತಿಯೊಬ್ಬ ಪ್ರಯಾಣಿಕರಿಗೆ ಟಿಕೆಟ್ ವಿತರಿಸುತ್ತಿದ್ದದ್ದು ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ. ಈ ಅಕ್ರಮವನ್ನು ಕಂಡು ಸ್ಥಳದಲ್ಲಿದ್ದ ಸಮಾಜ ಸೇವಕ ಬಾಬು ಪಾಟೀಲ್ ಅವರು ಪ್ರಶ್ನಿಸಿದಾಗ, ಬಸ್ ಚಾಲಕ ಸಾರ್ವಜನಿಕರ ಎದುರಲ್ಲೇ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದಬ್ಬಾಳಿಕೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ದಿನನಿತ್ಯ ನೂರಾರು ಬಸ್ಗಳು ಬೆಳಗಾವಿ ಭಾಗದಲ್ಲಿ ಸಂಚರಿಸುತ್ತಿದ್ದು, ಬೇರೆ ಬಸ್ಗಳಲ್ಲೂ ಇದೇ ರೀತಿ ಖಾಸಗಿ ವ್ಯಕ್ತಿಗಳನ್ನು ಬಳಸಿಕೊಂಡು ಅಕ್ರಮ ಎಸಗಲಾಗುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಇಡೀ ಘಟನೆಯ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರಿಗೆ ಇಲಾಖೆಯ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ. ತಕ್ಷಣವೇ ಹಿರಿಯ ಅಧಿಕಾರಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ತನಿಖೆ ನಡೆಸಿ, ತಪ್ಪಿತಸ್ಥ ಚಾಲಕ ಮತ್ತು ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸಮಾಜ ಸೇವಕ ಬಾಬು ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
